ಮಡಿಕೇರಿ: ಮಾಜಿ ಸೈನಿಕರಿಂದ ಬೃಹತ್ ವೌನ ಪ್ರತಿಭಟನೆ

ಮಡಿಕೇರಿ, ಜ.20: ನಿವೇಶನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹಾಗೂ ಅಮತ್ತಿಯ ನಿವೃತ್ತ ಸೇನಾಧಿಕಾರಿಯೊಬ್ಬರ ವಿರುದ್ಧ ಮೊಕದ್ದಮೆ ಹೂಡಿರುವ ಕಂದಾಯ ಅಧಿಕಾರಿಗಳ ಕ್ರಮ ಖಂಡಿಸಿ ಕೊಡಗು ಜಿಲ್ಲಾ ಮಾಜಿ ಸೈನಿಕರ ಸಂಘ ಶುಕ್ರವಾರ ನಗರದಲ್ಲಿ ಬೃಹತ್ ಮೌನ ಪ್ರತಿಭಟನೆ ನಡೆಸಿತು.
ಸಂಘದ ಅಧ್ಯಕ್ಷ ನಿವೃತ್ತ ಮೇಜರ್ ಜನರಲ್ ಬಿ.ಎ. ಕಾರ್ಯಪ್ಪ, ಉಪಾಧ್ಯಕ್ಷ ನಿವೃತ್ತ ಕರ್ನಲ್ ಚಿಣ್ಣಪ್ಪ, ಕಾರ್ಯದರ್ಶಿ ನಿವೃತ್ತ ಕರ್ನಲ್ ಒ.ಎಸ್.ಚಿಂಗಪ್ಪ ಅವರ ನೇತೃತ್ವದಲ್ಲಿ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಮಾಜಿ ಸೈನಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಸುಮಾರು 10 ನಿಮಿಷಗಳ ಕಾಲ ಮಾನವ ಸರಪಳಿ ರಚಿಸಿ ಜಿಲ್ಲಾಡಳಿತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ನಂತರ ಮೌನ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿದ ಪ್ರತಿಭಟನಾಕಾರರು, ಜಿಲ್ಲಾಡಳಿತ ಭವನದ ಎದುರು ಧರಣಿ ನಡೆಸಿದರು.
ಸ್ಥಳಕ್ಕಾಗಮಿಸಿದ ಶಾಸಕ ಕೆ.ಜಿ. ಬೋಪಯ್ಯ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, ದೇಶದ ಗಡಿ ಕಾಯ್ದ ನಿವೃತ್ತ ಯೋಧರ ಸಮಸ್ಯೆಗಳಿಗೆ ಸ್ಪಂದಿಸುವುದು ಮತ್ತು ಸೌಲಭ್ಯಗಳನ್ನು ಒದಗಿಸುವ ಹೊಣೆಗಾರಿಕೆ ಸರಕಾರದ ಮೇಲಿದೆ. ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಮಾಜಿ ಯೋಧರು ಹೋರಾಟಕ್ಕಿಳಿದಿರುವುದು ಆಡಳಿತ ವ್ಯವಸ್ಥೆಗೆ ಶೋಭೆ ತರುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಮಾತನಾಡಿ, ಜಿಲ್ಲೆಯಾದ್ಯಂತ ಹಲವಾರು ಕಂಪನಿಗಳು ಸಾವಿರಾರು ಎಕರೆ ಸರಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದು, ಅವುಗಳನ್ನು ತೆರವುಗೊಳಿಸಿ ನಿವೃತ್ತ ಯೋಧರಿಗೆ ಹಂಚಿಕೆ ಮಾಡಬೇಕೆಂದು ಆಗ್ರಹಿಸಿದರು.
ಸಂಘದ ಅಧ್ಯಕ್ಷ ಮೇಜರ್ ಜನರಲ್ ಬಿ.ಎ. ಕಾರ್ಯಪ್ಪ ಮಾತನಾಡಿ, 1991ರ ಪೂರ್ವದಲ್ಲಿ ನಿವೃತ್ತ ಯೋಧರಿಗೆ 5 ರಿಂದ 10 ಎಕರೆ ಜಾಗ ನೀಡಲಾಗುತ್ತಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಜಾಗ ಮಂಜೂರಾತಿಯನ್ನೇ ಸ್ಥಗಿತಗೊಳಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೂಡಿಗೆಯ ಸೈನಿಕ ಶಾಲೆಯಲ್ಲಿ ಕೊಡಗಿನ ಮಕ್ಕಳಿಗೆ ಮತ್ತು ಮಾಜಿ ಸೈನಿಕರ ಮಕ್ಕಳಿಗೆ ಮೀಸಲಾತಿ ಸೌಲಭ್ಯ ನೀಡಬೇಕು. ಮಾಜಿ ಸೈನಿಕರ ಮನೆ ಕಂದಾಯದಲ್ಲಿ ಶೇ.50ರಷ್ಟು ರಿಯಾಯತಿ ನೀಡಬೇಕು. ಫಾರಂ ನಂ.50-53ರಡಿ ಸಲ್ಲಿಸಿರುವ ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡಬೇಕು. ಸಮುದಾಯ ಭವನ ನಿರ್ಮಾಣಕ್ಕೆ ಒಂದು ಎಕರೆ ಜಾಗ ಮಂಜೂರು ಮಾಡಬೇಕು. ಯೋಧರ ಸ್ವಾಧೀನದಲ್ಲಿರುವ ಸರಕಾರಿ ಜಮೀನನ್ನು ಯಾವುದೇ ಆದೇಶವಿಲ್ಲದೆ ತೆರವುಗೊಳಿಸಬಾರದೆಂದು ಜಿಲ್ಲಾಡಳಿತ ಸುತ್ತೋಲೆ ಹೊರಡಿಸಬೇಕು ಎಂದು ಆಗ್ರಹಿಸಿದರು.
ಮೂರು ತಿಂಗಳೊಳಗೆ ಬೇಡಿಕೆ ಈಡೇರದಿದ್ದಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಸೂಕ್ತ ಸ್ಪಂದನೆಯ ಭರವಸೆ ನೀಡಿದರು.
ಪ್ರತಿಭಟನೆಯಲ್ಲಿ ನಿವೃತ್ತ ಪೊಲೀಸ್ ನೌಕರರ ಸಂಘದ ಅಧ್ಯಕ್ಷ ಎಂ.ಎ.ಅಪ್ಪಯ್ಯ, ಆಮ್ ಆದ್ಮಿ ಪಾರ್ಟಿಯ ತಿಮ್ಮಯ್ಯ, ಬಾಲಸುಬ್ರಮಣ್ಯ, ಬೆಳೆಗಾರರ ಒಕ್ಕೂಟದ ಹರೀಶ್, ಮಾನೀರ ವಿಜಯ್ ನಂಜಪ್ಪ, ಶರೀನ್ ಸುಬ್ಬಯ್ಯ, ಅಮ್ಮತ್ತಿ ಕೊಡವ ಸಮಾಜದ ಅಧ್ಯಕ್ಷ ವೂಕೊಂಡ ಬೋಸ್ ದೇವಯ್ಯ, ಕೊಡಗು ವನ್ಯಜೀವಿ ಸಂಘದ ಅಧ್ಯಕ್ಷ ಕರ್ನಲ್ ಸಿ.ಪಿ. ಮುತ್ತಣ್ಣ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅಭಿಮಾನಿಗಳ ಸಂಘದ ಅಧ್ಯಕ್ಷ ಮುನೀರ್ ಮಾಚಾರ್, ಜಿನ್ನು ನಾಣಯ್ಯ, ಮಧು ಬೋಪಣ್ಣ ಅಲ್ಲದೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.







