ಆಯುರ್ವೇದಕ್ಕೆ ವರ್ತಮಾನವೂ, ಭವಿಷ್ಯವೂ ಇದೆ: ಡಾ.ಆಳ್ವ

ಉಡುಪಿ, ಜ.24: ಆಯುರ್ವೇದ ಚಿಕಿತ್ಸಾ ಪದ್ಧತಿಗೆ ವರ್ತಮಾನವೂ ಇದೆ, ಭವಿಷ್ಯವೂ ಇದೆ. ಅದನ್ನು ಪಸರಿಸುವ ಸಲುವಾಗಿ ಸ್ವತಂತ್ರ ಹಾಗೂ ಶ್ರದ್ಧೆಯಿಂದ ಕಲಿಯಬೇಕು. ಮುಂದೆ ಆಯುರ್ವೇದ ಮಹಾ ಸಮ್ಮೇಳನ ನಡೆಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಮೂಡಬಿದ್ರಿಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಹೇಳಿದ್ದಾರೆ.
ಕುತ್ಪಾಡಿಯ ಎಸ್‌ಡಿಎಂ ಆಯುರ್ವೇದ ಕಾಲೇಜಿನ ಭಾವಪ್ರಕಾಶ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಭಾಗವಹಿಸಿ ಮಾತನಾಡುತಿದ್ದರು.
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಶ್ರೀಕಾಂತ್ ಯು ವಹಿಸಿದ್ದರು.
ವೈದ್ಯಕೀಯ ಅಧೀಕ್ಷಕ ಡಾ.ಮುರಳೀಧರ ಶರ್ಮ ವಾರ್ಷಿಕ ವರದಿ ವಾಚಿಸಿದರು.
ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸುಬ್ರಹ್ಮಣ್ಯ ಭಟ್ ಪಿ. ಶೈಕ್ಷಣಿಕ ಕ್ಷೇತ್ರದಲ್ಲಿ ಯೋಗ್ಯತಾ ಪ್ರಶಸ್ತಿ ಪಡೆದ ವಿದ್ಯಾರ್ಥಿಗಳನ್ನು ಪರಿಚಯಿಸಿದರು. ಆಟೋಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಯ ವಿಜೇತರಾದ ವಿದ್ಯಾರ್ಥಿ ಮತ್ತು ಅಧ್ಯಾಪಕರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ನಿತ್ಯಶ್ರೀ ಕೆ. ಸ್ವಾಗತಿಸಿದರು. ಕಾರ್ಯದರ್ಶಿ ಕಸ್ತೂರಿ ರಂಗನ್ ವಂದಿಸಿದರು. ಸಿಂಧುಶ್ರೀ ಬಲ್ಲೂಕರಾಯ ಮತ್ತು ರಕ್ಷಿತ್ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.







