ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ ಎ.ಕೆ.ಸುಬ್ಬಯ್ಯ ಎಚ್ಚರಿಕೆ
ಮಡಿಕೇರಿ, ಜ.27 : ದಿಡ್ಡಳ್ಳಿ ನಿರಾಶ್ರಿತರಿಗೆ ಈ ಹಿಂದೆ ಇದ್ದ ಪ್ರದೇಶದಲ್ಲೇ ನಿವೇಶನ ನೀಡಲು ಸಾಧ್ಯವಿಲ್ಲವೆಂದು ಹೇಳಿಕೆ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ ಅವರು ಜಿಲ್ಲೆಗೆ ಆಗಮಿಸುವ ಸಂದರ್ಭ ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿ ಮೂಲಕ ಕಪ್ಪುಬಾವುಟ ಪ್ರದರ್ಶಿಸುವುದಾಗಿ ಎ.ಕೆ.ಸುಬ್ಬಯ್ಯ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಬ್ಬಯ್ಯ, ಸಮಾಜ ಕಲ್ಯಾಣ ಸಚಿವ ಆಂಜನೇಯ ದಿಡ್ಡಳ್ಳಿ ನಿರಾಶ್ರಿತರಿಗೆ ಅದೇ ಪ್ರದೇಶದಲ್ಲಿ ಕಾನೂನಿನ ಚೌಕಟ್ಟಿನಡಿ ಅವಕಾಶವಿದ್ದರೆ ನಿವೇಶನ ಮಂಜೂರು ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ ನಿವೇಶನ ನೀಡಲು ಸಾಧ್ಯವಿಲ್ಲವೆಂದು ಹೇಳುವ ಮೂಲಕ ದೀನ ದಲಿತರ ವಿರೋಧಿಯಂತೆ ವರ್ತಿಸಿದ್ದಾರೆ ಎಂದು ಎ.ಕೆ. ಸುಬ್ಬಯ್ಯ ಆರೋಪಿಸಿದ್ದಾರೆ.
ದಿಡ್ಡಳ್ಳಿ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಗೈರು ಹಾಜರಾಗಿದ್ದ ಸಚಿವ ಸೀತಾರಾಂ, ಆಪ್ತ ಸಹಾಯಕ ಹರೀಶ್ ಬೋಪಣ್ಣ ಅವರ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಸಚಿವ ಸೀತಾರಾಂ ದಿಡ್ಡಳ್ಳಿ ನಿರಾಶ್ರಿತರ ಬಗ್ಗೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ. ಆದರೆ, ಆದಿವಾಸಿಗಳಿಂದ ಸುಮಾರು 6.10 ಲಕ್ಷ ರೂ. ಹಣ ಪಡೆದ ಅರಣ್ಯ ಸಿಬ್ಬಂದಿ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಇವರಿಂದ ಸಾಧ್ಯವಾಗಿಲ್ಲವೆಂದು ಟೀಕಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ದೂರು ನೀಡಿದ್ದರೂ ಯಾವುದೇ ಪ್ರತಿಕ್ರಿಯೆ ನೀಡದೆ ಮುಖ್ಯಮಂತ್ರಿಗಳು ಮೌನಕ್ಕೆ ಶರಣಾಗಿದ್ದಾರೆ ಎಂದು ಆರೋಪಿಸಿರುವ ಎ.ಕೆ. ಸುಬ್ಬಯ್ಯ, ಉಸ್ತುವಾರಿ ಸಚಿವ ಸೀತಾರಾಂ ಅವರು ಜಿಲ್ಲೆಗೆ ಆಗಮಿಸುವ ಸಂದರ್ಭ ಹೋರಾಟ ಸಮಿತಿ ಮೂಲಕ ಕಪ್ಪುಬಾವುಟ ಪ್ರದರ್ಶನ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.







