ನಾಲ್ಕು ವರ್ಷ ಪೂರೈಸಿದ ಸಚಿವರಿಗೆ ಕೋಕ್?
ನಾಳೆ ಕೆಪಿಸಿಸಿ ಸಮನ್ವಯ ಸಮಿತಿ ಸಭೆ
ಬೆಂಗಳೂರು, ಫೆ.25: ಕಾಂಗ್ರೆಸ್ ಹೈಕಮಾಂಡ್‌ಗೆ ಕಪ್ಪ ನೀಡಲಾಗಿದೆ ಎಂದು ಉಲ್ಲೇಖಿಸಿರುವ ವಿವಾದಿತ ಡೈರಿಯಲ್ಲಿನ ಅಂಶಗಳು ಮಾಧ್ಯಮಗಳಲ್ಲಿ ಬಯಲಾಗಿರುವ ಹಿನ್ನೆಲೆಯಲ್ಲಿ ಇಕ್ಕಟ್ಟಿಗೆ ಸಿಲುಕಿರುವ ರಾಜ್ಯ ಸರಕಾರದ ಮುಂದಿನ ನಡೆ ಕುರಿತು ಚರ್ಚೆ ನಡೆಸಲು ರವಿವಾರ ನಗರದ ಕೆಪಿಸಿಸಿ ಕಚೇರಿಯಲ್ಲಿ ಬೆಳಗ್ಗೆ 11ಗಂಟೆಗೆ ಸಮನ್ವಯ ಸಮಿತಿ ಸಭೆ ನಡೆಯಲಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್‌ಸಿಂಗ್ ನೇತೃತ್ವದಲ್ಲಿ ನಡೆಯಲಿರುವ ಸಮನ್ವಯ ಸಮಿತಿ ಸಭೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಸಚಿವರಾದ ಕೆ.ಜೆ.ಜಾರ್ಜ್, ಡಿ.ಕೆ.ಶಿವಕುಮಾರ್ ಸೇರಿದಂತೆ 20ಮಂದಿ ಸದಸ್ಯರು ಪಾಲ್ಗೊಳ್ಳಲಿದ್ದಾರೆ.
ವಿಧಾನಪರಿಷತ್ ಸದಸ್ಯ ಹಾಗೂ ಮುಖ್ಯಮಂತ್ರಿಯ ಸಂಸದೀಯ ಕಾರ್ಯದರ್ಶಿ ಕೆ.ಗೋವಿಂದರಾಜು ನಿವಾಸದ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಆದಾಯ ಮತ್ತು ತೆರಿಗೆ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎನ್ನಲಾದ ಡೈರಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ಗೆ ಕೋಟ್ಯಂತರ ರೂ.ಕಪ್ಪ ನೀಡಿರುವ ಅಂಶವನ್ನು ನಮೂದಿಸಿರುವುದಾಗಿ ರಾಷ್ಟ್ರೀಯ ಸುದ್ದಿ ವಾಹಿನಿಯೊಂದು ಸುದ್ದಿ ಪ್ರಸಾರ ಮಾಡಿತ್ತು.
ಅಲ್ಲದೆ, ಈ ವಿಚಾರಕ್ಕೆ ಸಂಬಂಧಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಲವು ದಿನಗಳಿಂದ ರಾಜ್ಯ ಸರಕಾರ ಕಾಂಗ್ರೆಸ್ ಹೈಕಮಾಂಡ್‌ಗೆ ಸುಮಾರು ಒಂದು ಸಾವಿರ ಕೋಟಿ ರೂ.ಕಪ್ಪ ನೀಡಿದೆ. ಈ ಅಂಶ ಗೋವಿಂದರಾಜು ಬಳಿ ವಶಪಡಿಸಿಕೊಂಡಿರುವ ಡೈರಿಯಲ್ಲಿದೆ ಎಂದು ಆರೋಪ ಮಾಡುತ್ತಾ ಬಂದಿದ್ದರು. ಬಿಜೆಪಿ ವಿರುದ್ಧ ಕೆಪಿಸಿಸಿ ಸತ್ಯಮೇವ ಜಯತೆ ರ್ಯಾಲಿ ನಡೆಸಿದ ದಿನದಂದೆ ಡೈರಿಯಲ್ಲಿದೆ ಎನ್ನಲಾದ ಅಂಶಗಳು ಮಾಧ್ಯಮಗಳಲ್ಲಿ ಪ್ರಸಾರಗೊಂಡು, ಕಾಂಗ್ರೆಸ್ ಪಕ್ಷ ಮುಜುಗರ ಅನುಭವಿಸಿತ್ತು. ಈ ಎಲ್ಲ ಸಂಗತಿಗಳನ್ನು ಹೇಗೆ ಎದುರಿಸಬೇಕು. ಮುಂದಿನ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಅನುಸರಿಸಬೇಕಾದ ರಣತಂತ್ರಗಳ ಕುರಿತು ಪ್ರಮುಖವಾಗಿ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ ನಡೆಯಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ನಾಲ್ಕು ವರ್ಷಗಳಿಂದ ಸಚಿವರಾಗಿರುವವರನ್ನು ಕೈ ಬಿಟ್ಟು, ಸಾಮಾಜಿಕ ನ್ಯಾಯ, ಪ್ರಾದೇಶಿಕ ಪ್ರಾತಿನಿಧ್ಯದ ಆಧಾರದಲ್ಲಿ ಹೊಸಬರಿಗೆ ಅವಕಾಶ ಮಾಡಿಕೊಟ್ಟು, ಹಿರಿಯ ಸಚಿವರನ್ನು ಪಕ್ಷ ಸಂಘಟನೆಯ ಕೆಲಸಕ್ಕೆ ಬಳಸಿಕೊಳ್ಳುವುದು ಸೇರಿದಂತೆ ಸುಮಾರು 11ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ತಿಳಿದು ಬಂದಿದೆ.
ಸಚಿವರಿಗೆ ಕೋಕ್?: ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಆರ್.ವಿ. ದೇಶಪಾಂಡೆ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ, ಅರಣ್ಯ ಸಚಿವ ರಮಾನಾಥ ರೈ, ಲೋಕೋಪಯೋಗಿ ಸಚಿವ ಡಾ. ಎಚ್.ಸಿ.ಮಹದೇವಪ್ಪ, ಆಹಾರ ಸಚಿವ ಯು.ಟಿ.ಖಾದರ್.ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ, ಕೃಷಿ ಸಚಿವ ಕೃಷ್ಣಭೈರೇಗೌಡ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಸಂಪುಟದಿಂದ ಕೈ ಬಿಡಲು ಉದ್ದೇಶಿಸಲಾಗಿದೆ ಎನ್ನಲಾಗಿದೆ.
ಮಾ.15ರಿಂದ ಆರಂಭಗೊಳ್ಳಲಿರುವ ಬಜೆಟ್ ಅಧಿವೇಶನದ ಬಳಿಕ ಸಚಿವ ಸಂಪುಟವನ್ನು ಪುನಾರಚಿಸಿ, ಯಾವುದೇ ಆರೋಪ, ಕಳಂಕವನ್ನು ಹೊಂದಿರದಂತಹ ಉತ್ಸಾಹಿಗಳಿಗೆ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆಂದು ತಿಳಿದು ಬಂದಿದ್ದು, ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್, ಕಾರ್ಯಾಧ್ಯಕ್ಷ ದಿನೇಶ್‌ಗುಂಡೂರಾವ್ ಜೊತೆ ಒಂದು ಸುತ್ತಿನ ಮಾತುಕತೆಯೂ ನಡೆದಿದೆ ಎನ್ನಲಾಗಿದೆ.
ಸಾಮಾನ್ಯ ಪ್ರಕ್ರಿಯೆ
‘ವಿಧಾನಸಭೆ ಚುನಾವಣೆ ಸಮೀಪಿಸುವ ಸಂದರ್ಭದಲ್ಲಿ ಹಿರಿಯ ಸಚಿವರನ್ನು ಪಕ್ಷದ ಸಂಘಟನೆಯ ಕೆಲಸಕ್ಕೆ ಬಳಸಿಕೊಳ್ಳುವುದು ಕಾಂಗ್ರೆಸ್ ಪಕ್ಷದ ಹಿಂದಿನ ಸಂಪ್ರದಾಯ. ಸಚಿವ ಸಂಪುಟ ಪುನಾರಚನೆ ಕುರಿತು ಮುಖ್ಯಮಂತ್ರಿಯ ಸಿದ್ದರಾಮಯ್ಯ ತೀರ್ಮಾನ ಕೈಗೊಳ್ಳುತ್ತಾರೆ’
-ಡಾ.ಜಿ.ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷ
ಪಕ್ಷದ ಕೆಲಸಕ್ಕೆ ಬದ್ಧ
‘ಕಾಂಗ್ರೆಸ್ ಹೈಕಮಾಂಡ್ ಆದೇಶದಂತೆ ನಾಲ್ಕು ವರ್ಷದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರದಲ್ಲಿ ಸಚಿವನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಒಂದು ಸರಕಾರ ಅಧಿಕಾರಕ್ಕೆ ಬರಬೇಕಾದರೆ ಪಕ್ಷ ಸಂಘಟನೆ ಮುಖ್ಯ. ನನ್ನನ್ನು ಸರಕಾರದಲ್ಲಿ ಮುಂದುವರೆಸಿದರೂ ಸಂತೋಷ. ಪಕ್ಷದ ಕೆಲಸಕ್ಕೆ ನಿಯೋಜಿಸಿದರೂ ಸಂತೋಷ. ಹೈಕಮಾಂಡ್ ನೀಡುವ ಆದೇಶವನ್ನು ಸಮರ್ಥವಾಗಿ ನಿಭಾಯಿಸುತ್ತೇನೆ’
-ರಾಮಲಿಂಗಾರೆಡ್ಡಿ ಸಾರಿಗೆ ಸಚಿವ