ಭದ್ರತಾ ಸಿಬ್ಬಂದಿಗಳ ಗುಂಡಿಗೆ ಮೂವರು ಉಗ್ರರು ಬಲಿ

ಶ್ರೀನಗರ,ಮಾ.15: ಉತ್ತರ ಕಾಶ್ಮೀರ ಕುಪ್ವಾರಾ ಜಿಲ್ಲೆಯ ಕಾಲಾರೂಸ್ ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ಭದ್ರತಾ ಪಡೆಗಳೊಂದಿಗಿನ ಗುಂಡಿನ ಕಾಳಗದಲ್ಲಿ ಮೂವರು ಉಗ್ರಗಾಮಿಗಳು ಕೊಲ್ಲಲ್ಪಟ್ಟಿದ್ದಾರೆ. ಘಟನೆಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ.
ಕಾಲಾರೂಸ್ ಗ್ರಾಮದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಮಾಹಿತಿ ಪಡೆದಿದ್ದ ಭದ್ರತಾ ಸಿಬ್ಬಂದಿಗಳು ಪ್ರದೇಶವನ್ನು ನಿರ್ಬಂಧಿಸಿ ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ಉಗ್ರರು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ್ದು, ಗುಂಡಿನ ಕಾಳಗದಲ್ಲಿ ಮೂವರು ಉಗ್ರರು ಸಾವನ್ನಪ್ಪಿದ್ದಾರೆ. ಅವರ ಗುರುತು ಇನ್ನಷ್ಟೇ ತಿಳಿದುಬರಬೇಕಾಗಿದೆ ಎಂದು ಪೊಲೀಸ್ ಅಧಿಕಾರಿಯೋರ್ವರು ತಿಳಿಸಿದರು.
ಗಾಯಾಳು ಪೊಲೀಸ್ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Next Story





