ಚಿನ್ನಾಭರಣ ಕಳವು: ಆರೋಪಿ ಸೆರೆ
ಶಿವಮೊಗ್ಗ, ಮಾ.19: ವಿವಿಧೆಡೆ ಚಿನ್ನಾಭರಣ ಕಳವು ಕೃತ್ಯಗಳಲ್ಲಿ ಭಾಗಿಯಾಗಿದ್ದ ಹಾಗೂ ಕೋವಿಯೊಂದನ್ನು ಅಪಹರಿಸಿದ್ದ ಎನ್ನಲಾದ ಆರೋಪಿಯನ್ನು ಭದ್ರಾವತಿ ತಾಲೂಕು ಹೊಳೆಹೊನ್ನೂರು ಪೊಲೀಸರು ಬಂಧಿಸಿ, ಲಕ್ಷಾಂತರ ರೂ. ವೌಲ್ಯದ ಕಳವು ಮಾಲು ವಶಕ್ಕೆ ಪಡೆದುಕೊಂಡಿದ್ದಾರೆ. ಭದ್ರಾವತಿ ತಾಲೂಕು ಆದ್ರಿಹಳ್ಳಿಯ ನಿವಾಸಿ ಸುರೇಶ್ (25) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತನಿಂದ 5 ಲಕ್ಷ ರೂ. ವೌಲ್ಯದ 137 ಗ್ರಾಂ ತೂಕದ ಚಿನ್ನಾಭರಣ ಮತ್ತು ಒಂದು ಕೋವಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿಯು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಆಲ್ದೂರು, ಕೊಟ್ಟಿಗೆಹಾರ ಮುಂತಾದ ಕಡೆಗಳಲ್ಲಿ 6 ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂಶ ವಿಚಾರಣೆಯ ವೇಳೆ ಪೊಲೀಸರಿಗೆ ಗೊತ್ತಾಗಿದೆ ಎನ್ನಲಾಗಿದೆ.
ಪ್ರಕರಣವೊಂದಕ್ಕೆ ಸಂಬಂಧಿಸಿದ ತನಿಖೆ ನಡೆಸುತ್ತಿದ್ದ ಹೊಳೆಹೊನ್ನೂರು ಪೊಲೀಸರಿಗೆ ಆರೋಪಿ ಸಿಕ್ಕಿಬಿದ್ದಿದ್ದು, ವಿಚಾರಣೆಯ ವೇಳೆ ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಕಳವು ಕೃತ್ಯಗಳಲ್ಲಿ ಭಾಗಿಯಾಗಿದ್ದ ವಿವರ ಬಾಯ್ಬಿಟ್ಟಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





