ಯೋಜನೆಗಳ ಮಾಹಿತಿ ಜನರಿಗೆ ನೀಡಿ: ಪ್ರಿಯಾಂಕ

ಉಡುಪಿ, ಮಾ.26: ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಗಿರಿಜನ ಉಪ ಯೋಜನೆಯಡಿ ವಿವಿಧ ಇಲಾಖೆಗಳು ಕೈಗೊಳ್ಳುವ ಕಾರ್ಯಕ್ರಮಗಳ ಕುರಿತು ಜನರಿಗೆ ವ್ಯಾಪಕವಾದ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.
ಶನಿವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ.ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಎಲ್ಲಾ ಇಲಾಖೆಗಳು ಪ.ಜಾತಿ ಉಪಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿ ಕೈಗೊಳ್ಳುವ ವಿವಿಧ ಕಾಮಗಾರಿಗಳ ಕುರಿತು ಮಾಹಿತಿ ಪತ್ರವನ್ನು ಆ ಸಮುದಾಯದವರು ವಾಸ ಮಾಡುವ ಪ್ರದೇಶದಲ್ಲಿ ವಿತರಿಸು ವಂತೆ ಹಾಗೂ ಗ್ರಾಮಸಭೆಗಳಲ್ಲಿ ಯೋಜನೆಗಳ ಮಾಹಿತಿ ನೀಡುವಂತೆ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಹಾಗೂ ಹೋಬಳಿ ಮಟ್ಟದಲ್ಲೂ ಸಹ ಮಾಹಿತಿ ಕಾರ್ಯಕ್ರಮ ಏರ್ಪಡಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಯೋಜನೆಯಲ್ಲಿ ನಿಗದಿಪಡಿಸಿದ ಸಂಪೂರ್ಣ ಅನುದಾನವನ್ನು ನಿಗದಿತ ಅವಧಿಯಲ್ಲಿಯೇ ವೆಚ್ಚ ಮಾಡಿ, ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸುವಂತೆ ಸೂಚಿಸಿದರು.
ಎಲ್ಲಾ ಇಲಾಖೆಗಳು ಪ.ಜಾತಿ ಉಪಯೋಜನೆ ಮತ್ತು ಗಿರಿಜನ ಉಪ ಯೋಜನೆ 2017-18ರಲ್ಲಿ ಕೈಗೊಳ್ಳಬಹುದಾದ ಕಾರ್ಯಕ್ರಮಗಳ ಕುರಿತು ಕ್ರಿಯಾ ಯೋಜನೆ ಸಿದ್ಧಪಡಿಸಿಟ್ಟುಕೊಳ್ಳುವಂತೆ ಹಾಗೂ ಪ್ರತಿ ತಿಂಗಳು 15ನೇ ತಾರೀಕಿನಂದು ಎಸ್‌ಸಿಪಿ, ಟಿಎಸ್‌ಪಿ ಸಭೆ ನಡೆಯಲಿದ್ದು, ಪೂರ್ವಾನುಮತಿ ಪಡೆಯದೇ ಸಭೆಗೆ ಹಾಜರಾಗದ ಅಧಿಕಾರಿಗಳು ವಿರುದ್ದ ಕ್ರಮ ಕೈಗೊಳ್ಳಲಾ ಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಜಿಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ರಮೇಶ್ ಹಾಗೂ ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.







