ಎಸೆಸೆಲ್ಸಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ

ಉಡುಪಿ, ಮಾ.27: ಮಾ.30ರಿಂದ ಎ.12ರವರೆಗೆ ಉಡುಪಿ ಜಿಲ್ಲೆಯ 52 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ಈ ಬಾರಿಯ ಎಸೆಸೆಲ್ಸಿ ಪರೀಕ್ಷೆ ಶಾಂತಿಯುತವಾಗಿ ನಡೆಯಲು ಅನುಕೂಲವಾಗು ವಂತೆ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಸೆಕ್ಷನ್ 144(1)ರಂತೆ ನಿಷೇಧಾಜ್ಞೆಯನ್ನು ವಿಧಿಸಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಆದೇಶ ಹೊರಡಿಸಿದ್ದಾರೆ.
ಈ ನಿಷೇಧಾಜ್ಞೆ ಆದೇಶವು ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ 200 ಮೀ. ಸುತ್ತಮುತ್ತ ಮಾ.30ರಿಂದ ಎ.12ರವರೆಗೆ ಪರೀಕ್ಷೆ ನಡೆಯುವ ದಿನಗಳಂದು ಬೆಳಗ್ಗೆ 8ರಿಂದ ಅಪರಾಹ್ನ 2 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಅಲ್ಲದೆ ಇದೇ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲು ಇರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಸಹ ಆದೇಶದಲ್ಲಿ ತಿಳಿಸಲಾಗಿದೆ.
ಪರೀಕ್ಷಾ ಕೇಂದ್ರಗಳ ಸುತ್ತ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲಾಗಿದೆ. ಅನುಮಾನಾಸ್ಪದ ವ್ಯಕ್ತಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶವನ್ನು ನಿಷೇಧಿಸಲಾಗಿದೆ. ಪರೀಕ್ಷಾ ಸಿಬ್ಬಂದಿ ಮತ್ತು ಅಧಿಕಾರಿ ಗಳಿಗೆ ಪರೀಕ್ಷಾರ್ಥಿ ಅಥವಾ ಹೊರಗಿನ ವ್ಯಕ್ತಿ ಯಾವುದೇ ರೀತಿಯ ಬೆದರಿಕೆ ಒಡ್ಡುವುದನ್ನು ನಿಷೇಧಿಸಿದೆ.





