ಅಕ್ರಮ ಮರಳುಗಾರಿಕೆ ತೊಡಗಿದ್ದವರ ವಿರುದ್ಧ ಕ್ರಮ: ಎಡಿಜಿಪಿ

ಉಡುಪಿ, ಎ.3: ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿರುವವರು ಎಷ್ಟೆ ಪ್ರಭಾವಿ ವ್ಯಕ್ತಿಗಳಾಗಿದ್ದರೂ ಅವರ ವಿರುದ್ಧ ಕಾನೂನಿನಡಿಯಲ್ಲಿ ಕ್ರಮ ತೆಗೆದು ಕೊಳ್ಳಲಾಗುವುದು ಎಂದು ಎಡಿಜಿಪಿ ಅಲೋಕ್ ಮೋಹನ್ ತಿಳಿಸಿದ್ದಾರೆ.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿಂದು ಕರೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿ ಹಾಗೂ ಉಪವಿಭಾಗಾ ಧಿಕಾರಿಗಳ ಮೇಲಿನ ಕೊಲೆಯತ್ನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಈಗಾಗಲೇ ಕೆಲವು ಮಂದಿಯನ್ನು ಬಂಧಿಸಲಾಗಿದ್ದು, ಉಳಿದವರ ವಿರುದ್ಧವೂ ಕೂಡ ಸೂಕ್ತ ಕಾನೂನು ಕ್ರಮ ಜರಗಿಸಲಾಗುವುದು ಎಂದರು.
ಅಕ್ರಮ ಮರಳುಗಾರಿಕೆಗೆ ಸಂಬಂಧಿಸಿದಂತೆ ರಚಿಸಲಾದ ಕಾರ್ಯಪಡೆಯ ಮುಖ್ಯಸ್ಥರಾಗಿರುವ ಜಿಲ್ಲಾಧಿಕಾರಿಗಳು ದೂರು ಬಂದ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ಮಾಡಲು ಹೋಗುವಾಗ ಪೊಲೀಸರಿಗೆ ಮಾಹಿತಿ ಕೊಡಬೇಕಾ ಗಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ಟಿ.ಬಾಲಕೃಷ್ಣ ಮಾತನಾಡಿ, ಘಟನೆ ಬಗ್ಗೆ ಮಾಹಿತಿ ಸಿಕ್ಕಿದ ಕೂಡಲೇ ಉಡುಪಿ ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಜಿಲ್ಲಾಧಿಕಾರಿಗಳು ನೀಡಿದ ಫೋಟೋ ಆಧರಿಸಿ ಏಳು ಮಂದಿಯನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಎಷ್ಟೆ ದೊಡ್ಡ ವ್ಯಕ್ತಿ ಗಳಾಗಿದ್ದರೂ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳಲಾಗುವುದು. ಮುಂದೆ ತನಿಖೆ ನಡೆಸಿ ಉಳಿದವರ ವಿರುದ್ಧವೂ ಕ್ರಮ ಜರಗಿಸಲಾಗುವುದು ಎಂದರು.
ಸದ್ಯ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ವನ್ನು ಮುಂದೆ ಕುಂದಾಪುರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗುವುದು. ಕಾರ್ಯಾಚರಣೆಗೆ ಮೊದಲು ಪೊಲೀಸ್ ಇಲಾಖೆಗೆ ಯಾವುದೇ ಮಾಹಿತಿ ನೀಡಿಲ್ಲ. ಮಾಹಿತಿ ಸೋರಿಕೆಯಾಗುತ್ತದೆ ಎಂಬ ಕಾರಣಕ್ಕೆ ಅವರು ಈ ರೀತಿ ಮಾಡಿದ್ದಾರೆ. ಆದರೆ ನಮ್ಮ ಇಲಾಖೆಯ ಅಧಿಕಾರಿಗಳ ಮೇಲೆ ಯಾವುದೇ ಅನುಮಾನ ಇಲ್ಲ. ಅವರೆಲ್ಲ ಪ್ರಾಮಾಣಿಕರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್ ಉಪಸ್ಥಿತರಿದ್ದರು.







