2011ರ ಕೆಪಿಎಸ್‌ಸಿ ನೇಮಕಾತಿ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ
ಬೆಂಗಳೂರು, ಮಾ.5: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ) 2011ರಲ್ಲಿ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳ ನೇಮಕ ಆದೇಶಕ್ಕೆ ರಾಜ್ಯ ಹೈಕೋರ್ಟ್‌ನ ವಿಭಾಗೀಯ ಪೀಠ ಇಂದು ತಡೆಯಾಜ್ಞೆ ನೀಡಿದೆ.
ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ 2011ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ಸ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳನ್ನು 362 ಸರಕಾರಿ ಹುದ್ದೆಗಳಿಗೆ ನೇಮಕ ಮಾಡುವ ರಾಜ್ಯ ಸರಕಾರದ ಆದೇಶಕ್ಕೆ ರಾಜ್ಯ ಹೈಕೋರ್ಟ್‌ನ ವಿಭಾಗೀಯ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಸರಕಾರ ಮತ್ತು ಕೆಎಟಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲು ಗ್ರೀನ್ ಸಿಗ್ನಲ್ ಕೊಟ್ಟಿರುವುದನ್ನು ಪ್ರಶ್ನಿಸಿ ರೇಣುಕಾಂಬಿಕೆ ಸೇರಿದಂತೆ ಹಲವರು ರಾಜ್ಯ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್ ಇದೀಗ ನೇಮಕಾತಿ ಆದೇಶಕ್ಕೆ ಮಧ್ಯಾಂತರ ತಡೆಯಾಜ್ಞೆ ನೀಡಿದೆ.
362 ಹುದ್ದೆಗಳ ನೇಮಕಕ್ಕೆ ಕೆಪಿಎಸ್‌ಸಿ 2014 ಮಾ.21ರಂದು ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗಿತ್ತು. ಈ ಅಂತಿಮ ಪಟ್ಟಿಯಲ್ಲಿ ಆಯ್ಕೆಯಾಗದ ಅಭ್ಯರ್ಥಿಗಳು ಕೂಡಾ ಪಟ್ಟಿ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದರು. ಪ್ರಕರಣ ಸಿಐಡಿ ತನಿಖೆನಡೆದು ನೇಮಕಾತಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವುದು ಬಯಲಿಗೆ ಬಂದಿತ್ತು.