ಮಹಿಳೆಯರಲ್ಲ್ಲಿ ಮಾನಸಿಕ ಖಿನ್ನತೆ ಹೆಚ್ಚಳ: ಜಿಲ್ಲಾಧಿಕಾರಿ ಕಳವಳ
ವಿಶ್ವ ಆರೋಗ್ಯ ದಿನಾಚರಣೆ

ಉಡುಪಿ, ಎ.7: ಭಾರತದಲ್ಲಿ ಶೇ.36ರಷ್ಟು ಮಂದಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಯಾರೊಂದಿಗೂ ತಮ್ಮ ನೋವನ್ನು ಹಂಚಿಕೊಳ್ಳಲು ಇಷ್ಟ ಪಡದ ಮಧ್ಯಮವರ್ಗದ ಮಹಿಳೆಯರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಖಿನ್ನತೆಗೆ ತುತ್ತಾಗುತ್ತಿದ್ದಾರೆ ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಕಳವಳ ವ್ಯಕ್ತಪಡಿಸಿದ್ದಾರೆ.
ಉಡುಪಿ ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಪುರಭವನದ ಮಿನಿ ಹಾಲ್‌ನಲ್ಲಿ ಆಯೋಜಿಸಲಾದ ವಿಶ್ವ ಆರೋಗ್ಯ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
ಮಾನಸಿಕ ಖಿನ್ನತೆ ಕುರಿತು ಜನಜಾಗೃತಿ ಮೂಡಿಸುವ ಕೆಲಸ ಆಗಬೇಕು ಎಂದು ಅವರು ತಿಳಿಸಿದರು.
ಜಿಪಂ ಅಧ್ಯಕ್ಷ ದಿನಕರ ಬಾಬು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಜಿಪಂ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಮಹಿಳಾ ಸರಕಾರಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಜಗದೀಶ್ ರಾವ್ ಉಪಸ್ಥಿತರಿದ್ದರು. ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ ಅಧ್ಯಕ್ಷತೆ ವಹಿಸಿದ್ದರು. ಮನೋರೋಗ ತಜ್ಞ ಡಾ.ಮಾನಸ್ ಮಾನಸಿಕ ಖಿನ್ನತೆ ಕುರಿತು ಮಾಹಿತಿ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೋಹಿಣಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾನಸಿಕ ರೋಗಗಳ ಕಾರ್ಯ ಕ್ರಮ ಅನುಷ್ಠಾನಾಧಿಕಾರಿ ಡಾ.ಸುರೇಂದ್ರ ಚಿಂಬಳ್‌ಕಾರ್ ವಂದಿಸಿದರು. ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಆನಂದ ಗೌಡ ಕಾರ್ಯಕ್ರಮ ನಿರೂಪಿಸಿದರು.





