ಮುಂದಿನ ಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಇಬ್ಬರು ಮಾತ್ರ ಕಣಕ್ಕೆ: ಎಚ್.ಡಿ.ದೇವೇಗೌಡ
ಬೆಂಗಳೂರು, ಎ. 9: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಕುಮಾರಸ್ವಾಮಿ, ರೇವಣ್ಣ ಮಾತ್ರ ಸ್ಪರ್ಧಿಸಲಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಪುನರುಚ್ಚರಿಸಿದ್ದಾರೆ.
ರವಿವಾರ ಇಲ್ಲಿನ ಮಾಗಡಿಯ ರಂಗನಾಥ ಸ್ವಾಮಿ ರಥೋತ್ಸವದ ಅಂಗವಾಗಿ ಪಟ್ಟಣದ ತಿರುಮಲ ಭವನ ಆವರಣದಲ್ಲಿ ಆರಂಭಿಸಲಾಗಿರುವ ಬಾಲಗಂಗಾಧರ ನಾಥ ಸ್ವಾಮಿಯವರ ಒಕ್ಕಲಿಗರ ಅರವಟಿಗೆ, ಅನ್ನದಾಸೋಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.
ಚನ್ನಪಟ್ಟಣ ಕ್ಷೇತ್ರದಿಂದ ಅನಿತಾ ಕುಮಾರಸ್ವಾಮಿ ಸ್ಪರ್ಧಿಸುವ ಬಗ್ಗೆ ಇನ್ನೂ ನಿರ್ಧಾರ ಆಗಿಲ್ಲ. ಇದರ ಬಗ್ಗೆ ಕುಮಾರಸ್ವಾಮಿ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ. ಅಲ್ಲದೆ, ಪ್ರಜ್ವಲ್ ರೇವಣ್ಣ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಸ್ಪಷ್ಟ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಅನ್ನ ದಾಸೋಹ ಪುಣ್ಯದ ಕೆಲಸ. ಬಾಲಗಂಗಾಧರನಾಥ ಸ್ವಾಮೀಜಿ ಹೆಸರಿನಲ್ಲಿ ಅನ್ನದಾನ ನಡೆಯುತ್ತಿರುವುದು ಶ್ರೇಷ್ಠ ಕೆಲಸ ಎಂದು ಅವರು ಬಣ್ಣಿಸಿದರು. ಬೆಂಗಳೂರು-ಮಂಗಳೂರು ನೇರ ರೈಲಿಗೆ ಗೊಮ್ಮಟೇಶ್ವರ ಎಕ್ಸ್‌ಪ್ರೆಟ್ ಎಂದು ನಾಮಕರಣ ಮಾಡಲು ಕೇಂದ್ರ ಸರಕಾರವನ್ನು ಜೆಡಿಎಸ್ ಆಗ್ರಹಿಸಲಿದೆ. ಎ.23ರಂದು ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಗುರುಗುಂಡ ಬ್ರಹ್ಮೇಶ್ವರ ಮಠಾಧೀಶ ನಂಜಾವಧೂತ ಸ್ವಾಮೀಜಿ ನೇತೃತ್ವದಲ್ಲಿ ಶಾಶ್ವತ ನೀರಾವರಿ ಹಕ್ಕೊತ್ತಾಯ ಸಮಾವೇಶ ನಡೆಯಲಿದ್ದು, ಬಯಲು ಸೀಮೆ ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರು ಒದಗಿಸುವಂತೆ ಸರಕಾರವನ್ನು ಒತ್ತಾಯಿಸಲಾಗುವುದು ಎಂದು ಹೇಳಿದರು.







