ಉಪ ಚುನಾವಣೆ ಫಲಿತಾಂಶ: ನಾಳೆ ಮಧ್ಯಾಹ್ನದ ವೇಳೆಗೆ ಬಹಿರಂಗ

ಬೆಂಗಳೂರು, ಎ. 12: ಮುಂಬರುವ ವಿಧಾನಸಭಾ ಚುನಾವಣೆ ದಿಕ್ಸೂಚಿಯೆಂದೇ ಭಾವಿಸಲಾಗಿರುವ ನಂಜನಗೂಡು ಮತ್ತು ಗುಂಡ್ಲುಪೇಟೆ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಎ.13ರಂದು ಬೆಳಗ್ಗೆ 8 ಗಂಟೆಯಿಂದ ಆರಂಭವಾಗಲಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರಬೀಳಲಿದೆ. ಕಾಂಗ್ರೆಸ್ ಮತ್ತು ಬಿಜೆಪಿಗೆ ಪ್ರತಿಷ್ಠೆ ಮತ್ತು ತೀವ್ರ ಪೈಪೋಟಿ ಸೃಷ್ಟಿಸಿರುವ ಉಪ ಚುನಾವಣೆ ವಿಜಯಮಾಲೆ ಯಾರ ಕೊರಳಿಗೆ ಎಂಬುದು ಕುತೂಹಲ ಮೂಡಿಸಿದೆ. ಶ್ರೀನಿವಾಸ ಪ್ರಸಾದ್, ಕಳಲೆ ಕೇಶಮೂರ್ತಿ, ನಿರಂಜನ್ ಕುಮಾರ್ ಹಾಗೂ ಗೀತಾ ಮಹದೇವಪ್ರಸಾದ್ ಸೇರಿದಂತೆ ಘಟಾನುಘಟಿಗಳ ಭವಿಷ್ಯ ಬಯಲಾಗಲಿದೆ.
ಮತ ಎಣಿಕೆ ಕಾರ್ಯಕ್ಕೆ ರಾಜ್ಯ ಚುನಾವಣಾ ಆಯೋಗ ಈಗಾಗಲೇ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ನಂಜನಗೂಡು ಕ್ಷೇತ್ರದ ಮತ ಎಣಿಕೆ ಊಟಿ ರಸ್ತೆಯಲ್ಲಿನ ಜೆಎಸ್‌ಎಸ್ ಕಾಲೇಜಿನಲ್ಲಿ ಹಾಗೂ ಗುಂಡ್ಲುಪೇಟೆ ಕ್ಷೇತ್ರದ ಮತ ಎಣಿಕೆ ಕಾರ್ಯವೂ ಸೇಂಟ್ ಜಾನ್ಸ್ ಕಾಲೇಜಿನಲ್ಲಿ ಜರುಗಲಿದೆ.
ಎ.9ರಂದು ನಡೆದ ಉಪ ಚುನಾವಣೆಯಲ್ಲಿ ಉಭಯ ಕ್ಷೇತ್ರಗಳಲ್ಲಿಯೂ ದಾಖಲೆ ಮತದಾನ ಆಗಿತ್ತು. ಶ್ರೀನಿವಾಸ ಪ್ರಸಾದ್ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಸಮಾಧಾನಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಗುಂಡ್ಲುಪೇಟೆ ಕ್ಷೇತ್ರದ ಶಾಸಕರಾಗಿದ್ದ ಎಚ್.ಎಸ್.ಮಹದೇವ ಪ್ರಸಾದ್ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ತೆರವಾಗಿದ್ದು, ಎರಡೂ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಈ ಉಪ ಚುನಾವಣೆಯಲ್ಲಿ ತೀವ್ರ ಪ್ರತಿಷ್ಠೆಯಾಗಿ ಸ್ವೀಕರಿಸಿದ್ದರು.
ಹೀಗಾಗಿ ಉಪ ಚುನಾವಣೆ ಫಲಿತಾಂಶವು ಘಟಾನುಘಟಿ ನಾಯಕರ ಅಳಿವು-ಉಳಿವಿನ ಪ್ರಶ್ನೆಯನ್ನು ಸೃಷ್ಟಿಸಿದೆ. ನಾಳೆ ಮತ ಎಣಿಕೆ ನಡೆಯುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು, ಪಕ್ಷದ ಕಾರ್ಯಕರ್ತರು ಮತಗಟ್ಟೆವಾರು ಯಾರಿಗೆ ಎಷ್ಟು ಮತ ಬರಬಹುದೆಂದು ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.







