ರಾಜ್ಯದಲ್ಲಿ ಬಿಜೆಪಿ ಆಟ ನಡೆಯಲ್ಲ: ಡಾ.ಜಿ.ಪರಮೇಶ್ವರ್

ತುಮಕೂರು, ಎ.13: ರಾಜ್ಯದಲ್ಲಿ ಬಿಜೆಪಿ ಆಟ ನಡೆಯುವುದಿಲ್ಲ ಎನ್ನುವುದಕ್ಕೆ ನಂಜನಗೂಡು ಮತ್ತು ಗುಂಡ್ಲುಪೇಟೆಯಲ್ಲಿ ನಡೆದ ಉಪ ಚುನಾವಣೆಯ ಫಲಿತಾಂಶವೇ ಸಾಕ್ಷಿ ಎಂದು ಗೃಹ ಸಚಿವ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಖಾಸಗಿ ಕಾರ್ಯಕ್ರಮದ ನಿಮಿತ್ತ ನಗರಕ್ಕೆ ಆಗಮಿಸಿದ್ದ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಿರೀಕ್ಷೆಯಂತೆ ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿರುವುದು ಸಂತಸ ತಂದಿದೆ. ರಾಜ್ಯದಲ್ಲಿ ನಡೆದಿರುವ ಅಭಿವೃದ್ಧಿ ಕೆಲಸಗಳನ್ನು ಗಮನಿಸಿ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ ಎಂದರು.
ಈ ಚುನಾವಣೆ ಮುಂದಿನ 2018ರ ಚುನಾವಣೆಗೆ ದಿಕ್ಸೂಚಿಯಾಗಿದ್ದು, 2018ರಲ್ಲಿಯೂ ಸಹ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು, ನಂಜನಗೂಡು ಮತ್ತು ಗುಂಡ್ಲುಪೇಟೆ ಮತದಾರರಿಗೆ ಬಿಜೆಪಿಯವರು ಎಷ್ಟೇ ಆಮಿಷವೊಡ್ಡಿದರೂ ಅದಕ್ಕೆ ಯಾರೂ ಸೊಪ್ಪು ಹಾಕಿಲ್ಲ. ನಿರೀಕ್ಷೆಯಂತೆ ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರದಲ್ಲಿ ಗೆದ್ದಿದ್ದೇವೆ ಎಂದು ಹೇಳಿದರು.





