ಪುತ್ತೂರು ಎಪಿಎಂಸಿ ಚುನಾವಣೆ : 29 ಮಂದಿ ಕಣದಲ್ಲಿ
ಪುತ್ತೂರು,ಎ.15 : ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ)ಯ 13 ಸ್ಥಾನಗಳ ಪೈಕಿ ಸಹಕಾರಿ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಕೃಷ್ಣಕುಮಾರ್ ರೈ ಕೆದಂಬಾಡಿಗುತ್ತು ಅವರು ಅವಿರೋಧವಾಗಿ ಆಯ್ಕೆಗೊಂಡಿದ್ದು, ಉಳಿದ 12 ಸ್ಥಾನಗಳಿಗೆ ಎ. 25ರಂದು ನಡೆಯಲಿರುವ ಚುನಾವಣೆಗೆ ಒಟ್ಟು 29 ಮಂದಿ ಅಭ್ಯರ್ಥಿಗಳು ಕಣದಲ್ಲಿ ಉಳಿದುಕೊಂಡಿದ್ದಾರೆ.
ನಾಮಪತ್ರ ಸಲ್ಲಿಸಿದ್ದ 37 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದ್ದ ಶನಿವಾರ 8 ಮಂದಿ ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ಹಿಂತೆಗೆದುಕೊಂಡಿದ್ದಾರೆ. ಚುನಾವಣೆ ನಡೆಯುವ ಎಲ್ಲಾ 12 ಸ್ಥಾನಗಳಲ್ಲಿಯೂ ಬಿಜೆಪಿ ಮತ್ತು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದು, ಮರ್ಧಾಳ, ಸವಣೂರು ಮತ್ತು ನೆಟ್ಟಣಿಗೆ ಮುಡ್ನೂರು ಕ್ಷೇತ್ರಗಳಲ್ಲಿ ಮಾತ್ರ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಇಬ್ಬರು ಸ್ವತಂತ್ರ ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದಾರೆ.
ಎಪಿಎಂಸಿಯ 13 ಸ್ಥಾನಗಳ ಪೈಕಿ ಸಹಕಾರಿ ಕ್ಷೇತ್ರಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಕೃಷ್ಣಕುಮಾರ್ ರೈ ಕೆದಂಬಾಡಿಗುತ್ತು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಇದರಿಂದಾಗಿ ಅವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಅವಿರೋಧವಾಗಿ ಆಯ್ಕೆಗೊಂಡಿರುವ ಕೃಷ್ಣಕುಮಾರ್ ರೈ ಅವರು ಪ್ರಸ್ತುತ ಪುತ್ತೂರು ತಾಲೂಕು ಟಿಎಪಿಸಿಎಂಎಸ್ ಅಧ್ಯಕ್ಷರಾಗಿದ್ದಾರೆ.
12 ಸ್ಥಾನಗಳಲ್ಲಿಯೂ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾಗಿ ಬಿಜೆಪಿ ಜಿಲ್ಲಾ ಸಮಿತಿಯ ಕಾರ್ಯದರ್ಶಿಯಾಗಿರುವ ಮಾಜಿ ಎಪಿಎಂಸಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಪುತ್ತೂರು ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಪುಲಸ್ತ್ಯಾ ರೈ, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ದಿನೇಶ್ ಮೆದು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಬಾಲಕೃಷ್ಣ ಬಾಣಜಾಲು ಮತ್ತು ತ್ರಿವೇಣಿ ಕರುಣಾಕರ್ ಪೆರ್ವೋಡಿ, ಬಿಜೆಪಿ ರಾಜ್ಯ ಎಸ್‌ಟಿ ಮೋರ್ಚಾದ ಕಾರ್ಯದರ್ಶಿ ಹಾಗೂ ಬಿಜೆಪಿ ಜಿಲ್ಲಾ ಎಸ್‌ಟಿ ಮೋರ್ಚಾದ ಅಧ್ಯಕ್ಷರಾಗಿದ್ದ ಮಂಜುನಾಥ್ ಎನ್.ಎಸ್. ಸ್ಪರ್ಧಾ ಕಣದಲ್ಲಿರುವ ಪ್ರಮುಖ ಬಿಜೆಪಿ ಅಭ್ಯರ್ಥಿಗಳು.
ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹೇಶ್ ರೈ ಅಂಕೋತಿಮಾರು, ಜಯಕರ್ನಾಟಕ ಸಂಘಟನೆಯ ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾಗಿದ್ದ ಪ್ರಕಾಶ್ಚಂದ್ರ ಆಳ್ವ, ಕಾರ್ತಿಕ್ ರೈ ಬೆಳ್ಳಿಪ್ಪಾಡಿ ಸ್ಪರ್ಧಾ ಕಣದಲ್ಲಿರುವ ಪ್ರಮುಖರಾಗಿದ್ದಾರೆ.







