ಕಾನೂನಿನ ನೆರವಿನೊಂದಿಗೆ ಅನಿಷ್ಠ ಪದ್ಧತಿ ಅಂತ್ಯ: ಸೊರಕೆ

ಉಡುಪಿ, ಎ.21: ಸಮಗ್ರ ಶಿಶು ಅಭಿವೃದ್ಧಿ ಯೋಜನೆಯು ಮಹಿಳೆಯರನ್ನು ಮತ್ತು ಮಕ್ಕಳಲ್ಲಿ ಅಪೌಷ್ಠಿಕತೆಯನ್ನು ನೀಗಿಸುವಲ್ಲಿ ಮಹತ್ವ ಪೂರ್ಣ ಪಾತ್ರ ವಹಿಸಿದ್ದು, ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ಧತಿ ಮುಂತಾದ ಅನಿಷ್ಠ ಪದ್ಧತಿ ಗಳನ್ನು ಕಾನೂನಿನ ನೆರವಿನೊಂದಿಗೆ ಸಮಾಜದಿಂದ ತೊಡೆದು ಹಾಕಲು ಪ್ರತಿಯೊಬ್ಬರೂ ಪ್ರಯತ್ನಿಸಬೇಕು ಎಂದು ಕಾಪು ಶಾಸಕ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ಜಂಟಿ ಆಶ್ರಯದಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆ, ಮಕ್ಕಳ ಹಕ್ಕುಗಳ ರಕ್ಷಣೆ, ಕಡ್ಡಾಯ ಶಿಕ್ಷಣ ಕಾಯ್ದೆ ಕುರಿತು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಸ್ತ್ರೀಶಕ್ತಿ ಗುಂಪುಗಳ ಸದಸ್ಯರು ಹಾಗೂ ಸಾರ್ವಜನಿಕರ ಭಾಗವಹಿಸುವಿಕೆಯಲ್ಲಿ ಕಾಪು ಬಿಲ್ಲವ ಸಹಾಯಕ ಸಂಘದ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಜನಾಂದೋಲನ ಕಾರ್ಯಕ್ರಮದಲ್ಲಿ ಅವರು ಮಾತನಾಡುತಿ ದ್ದರು.
ಕಾರ್ಯಕ್ರಮದ ಅಂಗವಾಗಿ ಕಾಪು ಶ್ರೀಲಕ್ಷ್ಮಿ ಜನಾದರ್ನ ದೇವಸ್ಥಾನದಿಂದ ಬಿಲ್ಲವ ಸಹಾಯಕ ಸಂಘದವರೆಗೆ ನಡೆದ ಜಾಥಾವನ್ನು ಜಿಪಂ ಅಧ್ಯಕ್ಷ ದಿನಕರ ಬಾಬು ಉದ್ಘಾಟಿಸಿದರು. ಜಿಪಂ ಉಪಾಧ್ಯಕ್ಷೆ ಶೀಲಾ.ಕೆ.ಶೆಟ್ಟಿ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಡಾ.ವನಿತಾ.ಎನ್.ತೊರವಿ, ಹಿರಿಯ ಸಿವಿಲ್ ನ್ಯಾಯಾಧೀಶೆ ಲತಾ ಮಾತನಾಡಿದರು.
ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಉಪಾಧ್ಯಕ್ಷ ರಾಜೇಂದ್ರ.ಪಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್ ಉಪಸ್ಥಿತರಿದ್ದರು. ಅಧ್ಯಕ್ಷತೆಯನ್ನು ಕಾಪು ಪುರಸಭೆ ಅಧ್ಯಕ್ಷೆ ಸೌಮ್ಯ ವಹಿಸಿದ್ದರು. ಪ್ರಭಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ವಿವೇಕಾ ನಂದ ಸ್ವಾಗತಿಸಿದರು. ಮೇಲ್ವಿಚಾರಕಿ ಶೋಭಾ ವಿ.ನಾಡಕರ್ಣಿ ವಂದಿಸಿದರು. ಮೇಲ್ವಿಚಾರಕಿ ಮೀರಾ ಕಾರ್ಯಕ್ರಮ ನಿರೂಪಿಸಿದರು.







