ರೈತರ ಆತ್ಮಹತ್ಯೆಗೆ ಬರ ಪರಿಸ್ಥಿತಿ ಕಾರಣವಲ್ಲ: ತಮಿಳುನಾಡು ಸರಕಾರದ ಹೇಳಿಕೆ

ಹೊಸದಿಲ್ಲಿ, ಎ.28: ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳಿಗೆ ಬರ ಪರಿಸ್ಥಿತಿ ಕಾರಣವಲ್ಲ . ವೈಯಕ್ತಿಕ ಕಾರಣದಿಂದ ಕೆಲವು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಮಿಳುನಾಡು ಸರಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ.
ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣ ತಡೆಗಟ್ಟಲು ಪರಿಣಾಮಕಾರಿ ಕ್ರಮಗಳನ್ನು ರೂಪಿಸಲು ವಿಫಲವಾಗಿರುವ ಬಗ್ಗೆ ರಾಜ್ಯ ಸರಕಾರವನ್ನು ತರಾಟೆಗೆತ್ತಿಕೊಂಡಿದ್ದ ಸುಪ್ರೀಂಕೋರ್ಟ್, ರೈತರ ಆತ್ಮಹತ್ಯೆ ಪ್ರಕರಣದ ಬಗ್ಗೆ ವಿವರವಾದ ಉತ್ತರವನ್ನು ಎರಡು ವಾರದೊಳಗೆ ಸಲ್ಲಿಸುವಂತೆ ಎಪ್ರಿಲ್ 13ರಂದು ಸೂಚಿಸಿತ್ತು.
ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಮತ್ತು ರಾಜ್ಯ ಸರಕಾರ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂಬುದು ನೋವಿನ ವಿಷಯವಾಗಿದೆ ಎಂದು ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಸುಪ್ರೀಂಕೋರ್ಟ್‌ನ ಪೀಠವೊಂದು ತಿಳಿಸಿದೆ. ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣ ಹೆಚ್ಚುತ್ತಿದ್ದು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿ ಎನ್‌ಜಿಒ ಸಂಸ್ಥೆಯೊಂದು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.