ಉತ್ತರ ಕರ್ನಾಟಕದತ್ತ ಜೆಡಿಎಸ್ ಗಮನ: ಎಚ್.ಡಿ.ಕುಮಾರಸ್ವಾಮಿ

ಹುಬ್ಬಳ್ಳಿ, ಎ.29: 2018ರಲ್ಲಿ ನಡೆಯಲಿರುವ ರಾಜ್ಯ ವಿಧಾನಸಭೆಯ ಚುನಾವಣೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಕನಿಷ್ಠ 40-50 ಸ್ಥಾನಗಳನ್ನು ಗೆಲ್ಲಬೇಕೆಂಬ ಗುರಿ ಹೊಂದಿದ್ದೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಶನಿವಾರ ನಗರದ ಬಸವವೃತ್ತದಲ್ಲಿ ಆಯೋಜಿಸಲಾಗಿದ್ದ ಜಗಜ್ಯೋತಿ ಬಸವೇಶ್ವರ ಜಯಂತ್ಯುತ್ಸವ ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಜೆಡಿಎಸ್ ಪಕ್ಷದ ಹಿರಿಯ ನಾಯಕ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಕನಿಷ್ಠ 40 ರಿಂದ 50 ಶಾಸಕರನ್ನು ಗೆಲ್ಲಿಸಿಕೊಳ್ಳಬೇಕೆಂಬ ಗುರಿ ಈಡೇರಿಕೆಗಾಗಿ ಇಂದಿನಿಂದಲೆ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದು ಕುಮಾರಸ್ವಾಮಿ ಹೇಳಿದರು.
ಉತ್ತರ ಕರ್ನಾಟಕ ಭಾಗದ ಹಾವೇರಿ, ಗದಗ, ಬಾಗಲಕೋಟೆ, ಧಾರವಾಡ ಮತ್ತಿತರ ಜಿಲ್ಲೆಗಳಲ್ಲಿ ಈಗಾಗಲೆ ವಿಧಾನಸಭಾವಾರು ಸಭೆಗಳನ್ನು ನಡೆಸಲಾಗಿದೆ. ಅಲ್ಲದೆ, ಅನ್ಯ ಪಕ್ಷದ ಮುಖಂಡರು ಜೆಡಿಎಸ್ ಸೇರ್ಪಡೆಯಾಗುತ್ತಿದ್ದಾರೆ. ಈ ಭಾಗದಲ್ಲಿ ಪಕ್ಷ ಸಂಘಟನೆಗೆ ಆಸಕ್ತಿ ತೋರುತ್ತಿದ್ದಾರೆ ಎಂದು ಅವರು ಹೇಳಿದರು.
ಮೇ 11 ರಿಂದ 13ರವರೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು, ಮೇ 6 ರಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗದಲ್ಲಿ ಜೆಡಿಎಸ್ ಪಕ್ಷದ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದರು.
ಮೇ ತಿಂಗಳಲ್ಲಿ ಉತ್ತರ ಕರ್ನಾಟಕ ಭಾಗದ ಹೆಚ್ಚಿನ ಗಮನ ಕೇಂದ್ರೀಕರಿಸಿ, ಪಕ್ಷ ಸಂಘಟನೆ ಹಾಗೂ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಸಂಬಂಧ ಶ್ರಮಿಸಲಾಗುವುದು ಎಂದು ಕುಮಾರಸ್ವಾಮಿ ಹೇಳಿದರು.
ಇದಕ್ಕೂ ಮುನ್ನ ಬಸವೇಶ್ವರ ಜಯಂತಿಯಲ್ಲಿ ಪಾಲ್ಗೊಂಡು ಮಾತನಾಡಿದ ಕುಮಾರಸ್ವಾಮಿ, 12ನೆ ಶತಮಾನದಲ್ಲಿ ಮಾನವತಾವಾದ, ವಿಚಾರವಾದ ಹಾಗೂ ಸಾಮಾಜಿಕ ಪರಿವರ್ತನೆಯಲ್ಲಿ ದೊಡ್ಡ ಕ್ರಾಂತಿಯನ್ನು ಮಾಡಿದ್ದ ಬಸವೇಶ್ವರರ ಜಯಂತಿಯನ್ನು ಇಂದು ವಿಶ್ವದಾದ್ಯಂತ ಆಚರಿಸಲಾಗುತ್ತಿದೆ ಎಂದರು.
ಬಸವೇಶ್ವರರ ಜಯಂತಿಯನ್ನು ಕೇವಲ ಅವರ ಭಾವಚಿತ್ರ ಹಾಗೂ ಪ್ರತಿಮೆಗೆ ಹಾರ ಹಾಕುವುದಕ್ಕಷ್ಟೇ ಸೀಮಿತವಾಗಿರಿಸುವುದು ಬೇಡ. ಸಮಾಜಕ್ಕೆ ಅವರು ನೀಡಿರುವ ಸಂದೇಶ, ಮಾರ್ಗದರ್ಶನಗಳನ್ನು ಅನುಷ್ಠಾನಕ್ಕೆ ತರುವಲ್ಲಿ ಪ್ರತಿಯೊಬ್ಬರೂ ಪ್ರಯತ್ನಿಸಬೇಕು ಎಂದು ಕುಮಾರಸ್ವಾಮಿ ಹೇಳಿದರು.
ಬಸವಣ್ಣ ನೀಡಿರುವ ಸಂದೇಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ, ನಮ್ಮಲ್ಲಿರುವ ಬಹುತೇಕ ನ್ಯೂನತೆಗಳನ್ನು ಹೊಗಲಾಡಿಸಬಹುದು ಎಂದು ಕುಮಾರಸ್ವಾಮಿ ತಿಳಿಸಿದರು. ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.







