ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್ ಗೆ ಬಿಟ್ಟ ವಿಚಾರ: ಡಾ. ಜಿ. ಪರಮೇಶ್ವರ್

ಮಂಗಳೂರು, ಮೇ 2: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್ ಗೆ ಬಿಟ್ಟ ವಿಚಾರವಾಗಿದ್ದು, ಈ ಬಗ್ಗೆ ತನಗೆ ಮಾತನಾಡಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್.ಎಂ. ಕೃಷ್ಣ ತೊರೆದ ನಂತರ ಪಕ್ಷಕ್ಕೆ ಹಾನಿಯಾಗಿಲ್ಲ. ಉಪ ಚುನಾವಣೆ ಫಲಿತಾಂಶವೇ ಇದಕ್ಕೆ ಸಾಕ್ಷಿಯಾಗಿದೆ ಎಂದರು.
ನಾನು ಸಿಎಂ ಆಗಬೇಕು ಎಂದು ಪೂಜಾರಿಯವರು ಹೇಳಿಕೆ ನೀಡಿರುವುದು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಬಿಜೆಪಿ ಭಿನ್ನಮತ ಆ ಪಕ್ಷದ ಆಂತರಿಕ ವಿಚಾರ. ಈ ಬಗ್ಗೆ ತಾನು ಮಾತನಾಡಲು ಇಚ್ಛಿಸುವುದಿಲ್ಲ ಎಂದು ಹೇಳಿದರು.
ಕಾರ್ತಿಕ್ ರಾಜ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲೆಗೆ "ಬೆಂಕಿ ಹಚ್ಚುವ" ಹೇಳಿಕೆ ನೀಡಿದ್ದ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಅವರೊಬ್ಬ ಜವಾಬ್ದಾರಿಯುತ ಜನಪ್ರತಿನಿಧಿ, ಹೇಳಿಕೆಯನ್ನು ಪ್ರಜ್ಞಾಪೂರ್ವಕವಾಗಿ ನೀಡಬೇಕು ಎಂದರು.'
ಎಚ್. ವಿಶ್ವನಾಥ್ ಪಕ್ಷ ತೊರೆಯಬಾರದು. ಅವರೊಬ್ಬ ಹಿರಿಯ ಕಾಂಗ್ರೆಸ್ ನಾಯಕರು. ಸಣ್ಣ ಪುಟ್ಟ ತಪ್ಪುಗಳಿದ್ದರೆ ಸರಿಪಡಿಸಬಹುದು. ಕುಳಿತು ಮಾತನಾಡಿದರೆ ಸರಿಪಡಿಸದ ಸಮಸ್ಯೆ ಯಾವುದೂ ಇಲ್ಲ ಎಂದರು.







