ರಿಯಲ್ ಎಸ್ಟೇಟ್ ಕಾಯ್ದೆಗೆ ವಿರೋಧವಿಲ್ಲ: ಎಂ.ಕೃಷ್ಣಪ್ಪ

ಬೆಂಗಳೂರು, ಮೇ 2: ಕೇಂದ್ರ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ರಿಯಲ್ ಎಸ್ಟೇಟ್ ನಿಯಂತ್ರಣ ಹಾಗೂ ಅಭಿವೃದ್ಧಿ ಕಾಯ್ದೆ ಯಾವ ಸಚಿವರು ವಿರೋಧ ವ್ಯಕ್ತಪಡಿಸಿಲ್ಲ ಎಂದು ವಸತಿ ಸಚಿವ ಎಂ.ಕೃಷ್ಣಪ್ಪ ಸ್ಪಷ್ಟಪಡಿಸಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಕೇಂದ್ರ ಸರಕಾರವು ರೇರಾ ಕಾಯ್ದೆಯನ್ನು ಜಾರಿಗೆ ತರುತ್ತಿರುವುದು ಸ್ವಾಗತಾರ್ಹ. ಆದರೆ, ಈ ಕಾಯ್ದೆ ಜಾರಿಗೆ ತರುವ ಮುನ್ನ ಯಾವುದೆ ಗೊಂದಲಗಳು ಇರಬಾರದು. ಈ ಹೀಗಾಗಿ ಕಾಯ್ದೆಯ ಸಾಧಕ, ಬಾಧಕಗಳ ಬಗ್ಗೆ ಚರ್ಚಿಸಿ ನಮ್ಮ ರಾಜ್ಯದಲ್ಲಿ ಜಾರಿಗೆ ತರಲಾಗುವುದು ಎಂದು ಕೃಷ್ಣಪ್ಪ ಹೇಳಿದರು.
‘ಗ್ರಾಹಕನೆ ದೊರೆ’ಯೆಂಬ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೆ ತರಲಾಗುವುದು ಎಂದು ಕೇಂದ್ರ ಸರಕಾರ ಹೇಳಿದೆ. ನವೆಂಬರ್‌ನಲ್ಲಿ ಈ ಕಾಯ್ದೆಯ ಕರಡು ಪ್ರತಿಯನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಲಾಗಿತ್ತು. ಅದರಂತೆ, ಸಾರ್ವಜನಿಕರ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ ಎಂದು ತಿಳಿಸಿದರು.
ರೇರಾ ಕಾಯ್ದೆಯನ್ನು ಜಾರಿಗೆ ತರಲು ಯಾವ ಸಚಿವರು ವಿರೋಧ ವ್ಯಕ್ತಪಡಿಸಿಲ್ಲ. ರಿಯಲ್ ಎಸ್ಟೇಟ್ ವ್ಯವಹಾರ ಮಾಡುವವರಿಗೂ ಯಾವುದೆ ಅಡ್ಡಿಯಿಲ್ಲ. ಈ ಕಾಯ್ದೆ ಜಾರಿಯಿಂದ ಯಾವುದೆ ಅನಾನುಕೂಲವಾಗುವುದಿಲ್ಲ ಎಂದು ತಿಳಿಸಿದರು.
11 ಲಕ್ಷ ಮನೆಗಳ ನಿರ್ಮಾಣದ ಗುರಿ, ಅದರಂತೆ ರಾಜ್ಯ ಸರಕಾರವು ಪ್ರತಿ ವರ್ಷ ಮೂರು ಲಕ್ಷ ಮನೆಗಳನ್ನು ನಿರ್ಮಿಸುವ ಗುರಿಯನ್ನು ಹೊಂದಿದೆ. ಕಳೆದ ನಾಲ್ಕು ವರ್ಷಗಳಲ್ಲಿ ನಮ್ಮ ಸರಕಾರವು ವಿವಿಧ ಯೋಜನೆಗಳಡಿಯಲ್ಲಿ 11 ಲಕ್ಷ ಮನೆಗಳನ್ನು ನಿರ್ಮಿಸಿದೆ ಎಂದು ಳಿಸಿದರು.
ಈ ವರ್ಷ ಒಟ್ಟು 6 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿಯಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಈ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮನೆಗಳಿಗಾಗಿ ಭೂ ಸ್ವಾಧೀನ ಪಡಿಸಿಕೊಳ್ಳುವುದು ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಪರಾಮರ್ಶೆ ನಡೆಸಲಾಗಿದೆ ಎಂದು ಎಂ.ಕೃಷ್ಣಪ್ಪ ಹೇಳಿದರು.







