ಕುಲಪತಿಗಳ ನೇಮಕಾತಿಗೆ ಸಮಿತಿ ರಚನೆ: ಬಸವರಾಜ ರಾಯರೆಡ್ಡಿ
‘ಸಂವಿಧಾನದ ಆಶಯಗಳು ಮತ್ತು ಉನ್ನತ ಶಿಕ್ಷಣದ ಮೌಲ್ಯಗಳು’ ರಾಷ್ಟ್ರೀಯ ವಿಚಾರ ಸಂಕಿರಣ

ಬೆಂಗಳೂರು, ಮೇ 6: ಕುಲಪತಿ ಹಾಗೂ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಪಾರದರ್ಶಕತೆಯನ್ನು ತರುವ ನಿಟ್ಟಿನಲ್ಲಿ ಸಮಿತಿಯನ್ನು ರಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಪರಿಶಿಷ್ಟ ಜಾತಿ ಮತ್ತು ವರ್ಗಗಳ ಅಧ್ಯಾಪಕರ ಸಂಘವು ಡಾ. ಬಿ.ಆರ್.ಅಂಬೇಡ್ಕರ್ ಅವರ 126ನೆ ಜನ್ಮದಿನಾಚರಣೆ ಅಂಗವಾಗಿ ನಗರದ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಕಚೇರಿ ಆವರಣದಲ್ಲಿ ಏರ್ಪಡಿಸಿದ್ದ ‘ಸಂವಿಧಾನದ ಆಶಯಗಳು ಮತ್ತು ಉನ್ನತ ಶಿಕ್ಷಣದ ಮೌಲ್ಯಗಳು’ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.
ವಿಶ್ವವಿದ್ಯಾಲಯಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಜಕೀಯ ಒತ್ತಡಗಳು, ಭ್ರಷ್ಟಾಚಾರ, ಜಾತೀಯತೆಯೇ ಪ್ರಧಾನ ಅಂಶವಾಗಿದೆ. ಇಂತಹ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಯುವ ನಿಟ್ಟಿನಲ್ಲಿ ಸಮಿತಿಯೊಂದನ್ನು ರಚಿಸಲಾಗಿದೆ. ಸಮಿತಿಯಲ್ಲಿರುವ ಶಿಕ್ಷಣ ತಜ್ಞರು ನೀಡುವ ನೀತಿ-ನಿಯಮಗಳನ್ವಯ ನೇಮಕಾತಿಯನ್ನು ಮಾಡಿಕೊಳ್ಳಲಾಗುವುದು ಎಂದು ಅವರು ಹೇಳಿದರು.
ಭ್ರಷ್ಟಾಚಾರಗಳ ಕೂಪ: ಇತರೆ ಇಲಾಖೆಗಳಿಗೆ ಹೋಲಿಸಿದರೆ ಶಿಕ್ಷಣ ಇಲಾಖೆಯಲ್ಲಿ ಅತಿ ಹೆಚ್ಚು ಭ್ರಷ್ಟಾಚಾರವಿದೆ ಎನ್ನಲಾಗುತ್ತಿದೆ. ವಿಶ್ವವಿದ್ಯಾಲಯಗಳ ಕಟ್ಟಡ ನಿರ್ಮಾಣ ಕಾಮಗಾರಿಗಳಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ನಡೆಯುತ್ತಿದೆ. ಕಟ್ಟಡ ನಿರ್ಮಾಣ ತೀರ ಕಳಪೆ ಮಟ್ಟದಲ್ಲಿದೆ ಎಂದು ಬಸವರಾಜ ರಾಯರೆಡ್ಡಿ ಬೇಸರ ವ್ಯಕ್ತಪಡಿಸಿದರು.
ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಸೇರಿದಂತೆ ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳಲ್ಲಿ ಸಾಕಷ್ಟು ಹಣ ಕೊಳೆಯುತ್ತಿದೆ. ಆ ಹಣವನ್ನು ಹೇಗೆ ಸದ್ಬಳಕೆ ಮಾಡಿಕೊಳ್ಳಬೇಕೆಂಬ ಜ್ಞಾನ ಕಿಂಚಿತ್ತೂ ಇಲ್ಲದಾಗಿದೆ. ಹಲವು ವಿಶ್ವವಿದ್ಯಾಲಯಗಳ ಹಣಕಾಸು ವ್ಯವಹಾರವನ್ನು ಭೌತಶಾಸ್ತ್ರ, ರಾಸಾಯನಶಾಸ್ತ್ರ ಪ್ರಾಧ್ಯಾಪಕರು ನಿರ್ವಹಣೆ ಮಾಡುತ್ತಿದ್ದಾರೆ. ಇಂತಹ ಅವೈಜ್ಞಾನಿಕ ಹಣಕಾಸು ವ್ಯವಹಾರದಿಂದಾಗಿ ವಿಶ್ವವಿದ್ಯಾಲಯಗಳು ಪ್ರಗತಿಯಲ್ಲಿ ಕುಂಠಿತಗೊಂಡು, ಜನರ ವಿಶ್ವಾಸವನ್ನು ಕಳೆದುಕೊಳ್ಳುತ್ತಿವೆ ಎಂದು ಅವರು ಹೇಳಿದರು.
ಅತಿಥಿ ಉಪನ್ಯಾಸಕರ ಖಾಯಂ ಅಸಾಧ್ಯ: "ಸರಕಾರ ನಿಯಮದ ಪ್ರಕಾರ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡಿಕೊಳ್ಳಲು ಬರುವುದಿಲ್ಲ. ಕಾನೂನು ಉಲ್ಲಂಘಿಸಿ ನೇಮಕಾತಿ ಮಾಡಿಕೊಂಡರೆ ನಾನು ಜೈಲು ಸೇರಬೇಕಾಗುತ್ತದೆ. ಹಾಗೂ 13 ಸಾವಿರ ಮಂದಿಯಿರುವ ಅತಿಥಿ ಉಪನ್ಯಾಸಕರನ್ನು ನೇಮಕಾತಿ ಮಾಡಿಕೊಳ್ಳುವಷ್ಟು ಹುದ್ದೆಗಳು ನಮ್ಮಲ್ಲಿಲ್ಲ" ಎಂದು ಅವರು ತಿಳಿಸಿದರು.
ಕಾರ್ಯಕ್ರಮಲ್ಲಿ ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ, ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುರಳಿಧರ ಹಾಲಪ್ಪ, ರಾಜ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಪರಿಶಿಷ್ಟ ಜಾತಿ/ವರ್ಗಗಳ ಅಧ್ಯಾಪಕರ ಸಂಘದ ಅಧ್ಯಕ್ಷ ಕೃಷ್ಣಪ್ಪ ಮತ್ತಿತರರಿದ್ದರು.







