ಜೆಡಿಎಸ್ ಸೇರುವ ಇಂಗಿತ ವ್ಯಕ್ತಪಡಿಸಿರುವ ಇಬ್ರಾಹೀಂ?
ಬೆಂಗಳೂರು, ಮೇ 6: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಕಾಂಗ್ರೆಸ್ ಮುಖಂಡ, ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಸಿ.ಎಂ.ಇಬ್ರಾಹೀಂ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಶನಿವಾರ ಬೆಂಗಳೂರು-ಮೈಸೂರು ರಸ್ತೆಯಲ್ಲಿರುವ ಶ್ರೀ ಧರ್ಮಸ್ಥಳ ಆಯುರ್ವೇದ ಚಿಕಿತ್ಸಾ ಕೇಂದ್ರದಲ್ಲಿ ವಿಶ್ರಾಂತಿ ಪಡೆಯುತ್ತಿರುವ ದೇವೇಗೌಡರನ್ನು ಭೇಟಿ ಮಾಡಿದ ಇಬ್ರಾಹೀಂ, ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಆರೋಗ್ಯ ವಿಚಾರಿಸುವ ಉದ್ದೇಶದಿಂದ ದೇವೇಗೌಡರನ್ನು ಭೇಟಿಯಾದ ಇಬ್ರಾಹೀಂ, ಪ್ರಸ್ತುತ ರಾಜ್ಯ ರಾಜಕೀಯದ ಬೆಳವಣಿಗೆಗಳ ಕುರಿತು ದೇವೇಗೌಡ ರೊಂದಿಗೆ ಚರ್ಚೆ ನಡೆಸಿದ್ದಾರೆ. ಇದೇ ಸಂದರ್ಭದಲ್ಲಿ ಜೆಡಿಎಸ್ ಪಕ್ಷ ಸೇರುವ ಇಂಗಿತ ವ್ಯಕ್ತಪಡಿಸಿರುವ ಇಬ್ರಾಹೀಂ, ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಕಲ್ಪಿಸಿಕೊಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಮೊದಲು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ, ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿ, ಸ್ಥಾನಮಾನ ನೀಡುವ ವಿಚಾರವನ್ನು ಆನಂತರ ಚರ್ಚೆ ಮಾಡೋಣ. ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವುದಷ್ಟೇ ನಮ್ಮ ಮುಂದಿರುವ ಸದ್ಯದ ಗುರಿ ಎಂದು ಇಬ್ರಾಹೀಂಗೆ ದೇವೇಗೌಡರು ಕಿವಿಮಾತು ಹೇಳಿದ್ದಾರೆ ಎಂದು ತಿಳಿದು ಬಂದಿದೆ.





