ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ವಿಚಾರವಾಗಿ ನಾಯಕರ ಜೊತೆ ಸಮಾಲೋಚನೆ: ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್

ಬೆಂಗಳೂರು, ಮೇ 8: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಸಂಬಂಧಪಟ್ಟಂತೆ ನಾಯಕರ ಜೊತೆ ಸಮಾಲೋಚನೆ ನಡೆಸಲಿದ್ದೇನೆ. ಆ ಬಳಿಕ ಈ ಕುರಿತಂತೆ ಮಾತನಾಡುತ್ತೇನೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಬೆಂಗಳೂರಿನಲ್ಲಿಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಉಸ್ತುವಾರಿಯೂ ಆಗಿರು ಅವರು ಇಂದು ಬೆಳಗ್ಗೆ ಬೆಂಗಳೂರು ಅಂತಾರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಬೆಂಗಳೂರಿಗೆ ಆಗಮಿಸಿದ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಕರ್ನಾಟಕ ಕಾಂಗ್ರೆಸ್‌ನ ಉಸ್ತುವಾರಿಯಾಗಿ ನೇಮಕ ಆದ ಬಳಿಕ ಮೊದಲ ಬಾರಿ ನಾನು ಇಲ್ಲಿಗೆ ಬಂದಿದ್ದೇನೆ. ಎಲ್ಲರ ಜೊತೆ ನಾನು ಸಮಾಲೋಚನೆ ನಡೆಸುತ್ತೇನೆ.ಮೂರು ದಿನ ಪದಾಧಿಕಾರಿಗಳು, ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸುತ್ತೇನೆ ಎಂದು ಅವರು ನುಡಿದರು.
ಕೆ.ಸಿ.ವೇಣುಗೋಪಾಲ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಹಾಗೂ ಗೃಹ ಸಚಿವ ಡಾ ಜಿ.ಪರಮೇಶ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, ಶಾಸಕ ಎಸ್.ಟಿ.ಸೋಮಶೇಖರ್ ಬರಮಾಡಿಕೊಂಡರು.







