ಬಿಎಸ್‌ವೈ ಜೊತೆ ವೈರತ್ವವಿಲ್ಲ: ಕೆ.ಎಸ್.ಈಶ್ವರಪ್ಪ

ಬಳ್ಳಾರಿ, ಮೇ 8: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ತನ್ನ ನಡುವೆ ಯಾವುದೇ ವೈರತ್ವವಿಲ್ಲ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಸ್ಪಷ್ಟನೆ ನೀಡಿದ್ದಾರೆ.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವಿಬ್ಬರೂ ಹಿಂದೂಸ್ತಾನ-ಪಾಕಿಸ್ತಾನವಲ್ಲ. ಎಲ್ಲರೂ ಒಗ್ಗಟ್ಟಾಗಿದ್ದೇವೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ‘ಬಿಜೆಪಿ ಮಿಷನ್ 150’ ನಮ್ಮ ಗುರಿಯಾಗಿದೆ ಎಂದರು.
"ಮೈಸೂರಿನಲ್ಲಿ ಶನಿವಾರ ಹಾಗೂ ರವಿವಾರ ನಡೆದ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲೂ ನಾನು ಹಾಗೂ ಯಡಿಯೂರಪ್ಪ ಒಟ್ಟಿಗಿದ್ದೆವು. ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಬೇಕು. ಅದಕ್ಕಾಗಿ ಮುಂದಿನ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲಬೇಕೆಂಬ ನಮ್ಮ ಗುರಿಯಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರವು ಎಲ್ಲ ರಂಗಗಳಲ್ಲಿಯೂ ಸೋಲು ಅನುಭವಿಸಿದೆ. ಅಧಿಕಾರಿಗಳು ಮುಖ್ಯಮಂತ್ರಿ ಹಾಗೂ ಸಚಿವರ ಮಾತುಗಳನ್ನು ಕೇಳದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಕಿಡಿಕಾರಿದರು.
ಬರಗಾಲದಿಂದ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ, ರೈತರಿಗೆ ಸರಕಾರದ ನೆರವು ಸಿಗುತ್ತಿಲ್ಲ. ಮೇ 18ರಿಂದ ಬರಪೀಡಿತ ಪ್ರದೇಶಗಳಲ್ಲಿ ಪ್ರವಾಸ ಕೈಗೊಂಡು ಮಾಹಿತಿ ಕಲೆಹಾಕಲಿದ್ದೇನೆ. ಪಕ್ಷದ ಕಾರ್ಯಕಾರಿಣಿಯಲ್ಲಿ ಬರಗಾಲದ ಕುರಿತು ವಿಷಯ ಮಂಡನೆ ಮಾಡಿದ್ದೇನೆ. ಆದರೆ, ಈಶ್ವರಪ್ಪಗೆ ಬರದ ಬಗ್ಗೆ ಏನು ಗೊತ್ತಿಲ್ಲ ಎಂದು ಮುಖ್ಯಮಂತ್ರಿ ನೀಡಿರುವ ಹೇಳಿಕೆಯಿಂದ ಮನಸ್ಸಿಗೆ ನೋವಾಗಿದೆ ಎಂದು ಈಶ್ವರಪ್ಪ ಹೇಳಿದರು.
ರಾಜ್ಯ ಸರಕಾರವು ಬರಗಾಲ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ರಾಜ್ಯದಲ್ಲಿನ ಬರಗಾಲದ ಬಗ್ಗೆ ಅವರಿಗೆ ಅರಿವಿಲ್ಲ. ಆದ್ದರಿಂದಲೇ, ರಾಜ್ಯದ ಜನತೆಗೆ ತಪ್ಪು ಮಾಹಿತಿಗಳನ್ನು ನೀಡುತ್ತಿದ್ದಾರೆ ಎಂದು ಈಶ್ವರಪ್ಪ ಕಿಡಿಕಾರಿದರು.
ನಂಜನಗೂಡು ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ ಮಾತ್ರಕ್ಕೆ ವಿರೋಧ ಪಕ್ಷಗಳ ಬಗ್ಗೆ ಮುಖ್ಯಮಂತ್ರಿ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದರು.
ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಚಟುವಟಿಕೆಗಳ ಕುರಿತು ಪ್ರತಿಕ್ರಿಯಿಸಿದ ಈಶ್ವರಪ್ಪ, ಬ್ರಿಗೇಡ್ ತನ್ನಷ್ಟಕ್ಕೆ ತಾನು ಮುಂದುವರೆಯಲಿದೆ. ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಆಯ್ಕೆ ಚುನಾವಣೆಯಲ್ಲಿ ಸಂಸದ ಶ್ರೀರಾಮುಲು ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತ ಚಲಾಯಿಸಿರುವ ಕುರಿತು ತನಗೆ ಮಾಹಿತಿಯಿಲ್ಲ. ಅದು ಅವರ ವೈಯಕ್ತಿಕ ನಿರ್ಧಾರ ಎಂದರು.







