ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಸಂಬಂಧಿಸಿ ಮೇ ಅಂತ್ಯದೊಳಗೆ ತೀರ್ಮಾನ : ಕೆ.ಸಿ. ವೇಣುಗೋಪಾಲ್

ಬೆಂಗಳೂರು, ಮೇ 10: ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಸಂಬಂಧಿಸಿ ಮೇ ಅಂತ್ಯದೊಳಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕೆಪಿಸಿಸಿ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ತಿಳಿಸಿದರು.
ಕೆಪಿಸಿಸಿ ಸಮನ್ವಯ ಸಮಿತಿ ಸಭೆಯ ಬಳಿಕ ಮಾತನಾಡಿದ ಅವರು ಕಾಂಗ್ರೆಸ್ ಮುಖಂಡರುಗಳ ಜೊತೆ ಚರ್ಚಿಸಲಾಗಿದ್ದು, ಸಣ್ಣ ಪುಟ್ಟ ವ್ಯತ್ಯಾಸಗಳನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್‌ನಲ್ಲಿ ಸಣ್ಣಪಟ್ಟ ಸಮಸ್ಯೆಗಳು, ಅಸಮಾಧಾನ ಇದೆ.ಆದ್ರೆ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಇಲ್ಲಿ ಕಡಿಮೆ ಇದೆ ಎಂದು ಅವರು ಅಭಿಪ್ರಾಯಪಟ್ಟರು.
'' ನಮ್ಮದು ಆಂತರಿಕ ಪ್ರಜಾಪ್ರಭುತ್ವ ಇರುವ ಪಕ್ಷವಾಗಿದೆ. ಎಲ್ಲ ಸಮಸ್ಯೆಗಳನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು. ಕಾಂಗ್ರೆಸ್ ಗೆ 2018ರ ಚುನಾವಣೆ ಅತ್ಯಂತ ಮಹತ್ವದ್ದು, ಚುನಾವಣೆ ಎದುರಿಸಲು ತಯಾರಿ ನಡೆಸಲಾಗುವುದು ಎಂದು ವೇಣುಗೋಪಾಲ್ ಹೇಳಿದರು.
ಪಕ್ಷದ ಹೈಕಮಾಂಡ್ ವಹಿಸಿಕೊಟ್ಟಿರುವ ರಾಜ್ಯ ಕಾಂಗ್ರೆಸ್ ವ್ಯವಹಾರವನ್ನು ನೋಡಿಕೊಳ್ಳಲು ಬೆಂಗಳೂರಿನಲ್ಲಿ ಮನೆ ಮಾಡುವುದಾಗಿ ವೇಣುಗೋಪಾಲ್ ಘೋಷಿಸಿದರು.





