‘ಉದ್ಯೋಗ ಯೋಜನೆ’ಗೆ ನಟ ಪುನೀತ್ ರಾಯಭಾರಿ

ಬೆಂಗಳೂರು, ಮೇ 10: ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ವೆಬ್ ಪೋರ್ಟಲ್, ಮೊಬೈಲ್ ಆ್ಯಪ್‌ನ್ನು ಮೇ 15ರಂದು ಬಿಡುಗಡೆ ಮಾಡಲಿದ್ದು, ಈ ಯೋಜನೆಗೆ ನಟ ಪುನೀತ್ ರಾಜ್‌ಕುಮಾರ್ ರಾಯಭಾರಿಯಾಗಲು ಮುಂದೆ ಬಂದಿದ್ದಾರೆಂದು ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ ಅಧ್ಯಕ್ಷ ಮುರಳೀಧರ ಹಾಲಪ್ಪ ತಿಳಿಸಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 15ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಈ ಯೋಜನೆಗೆ ಸಿಎಂ ಚಾಲನೆ ನೀಡಲಿದ್ದಾರೆ. ನಿಗಮದಿಂದ 5ಲಕ್ಷ ಯುವಕ-ಯುವತಿಯರಿಗೆ ತರಬೇತಿ ನೀಡಲು ಉದ್ದೇಶಿಸಲಾಗಿದ್ದು, 1ಲಕ್ಷ ಉದ್ಯೋಗಾವಕಾಶ ಕಲ್ಪಿಸುವ ಗುರಿ ಹೊಂದಲಾಗಿದೆ ಎಂದರು.
ವೃತ್ತಿಗೆ ಸಂಬಂಧಪಟ್ಟಂತೆ ನಿರುದ್ಯೋಗಿ ಯುವಕ-ಯುವತಿಯರಿಗೆ ದೇಶದಲ್ಲಿ ವ್ಯಾಸಂಗ-ಉದ್ಯೋಗ ಯೋಜನೆ ಕಲ್ಪಿಸುವ ಉದ್ದೇಶವನ್ನು ನಿಗಮ ಹೊಂದಿದೆ ಎಂದ ಅವರು, ಸ್ವಯಂ ಉದ್ಯಮಿದಾರರಾಗಲು ಸರಕಾರದಿಂದ ಸಂಪೂರ್ಣ ಸಹಕಾರ ನೀಡುವುದು ಸೇರಿದಂತೆ ನಿರುದ್ಯೋಗಿಗಳಿಗೆ ಸಹಾಯವಾಗುವ ನಿಟ್ಟಿನಲ್ಲಿ ಸರಕಾರ ಮುಂದಾಗಿದೆ ಎಂದು ಮುರಳೀಧರ ಹಾಲಪ್ಪ ತಿಳಿಸಿದರು.
ಕೌಶಲ್ಯ ಅಭಿವೃದ್ಧಿ ನಿಗಮದ ಮಹತ್ವಾಕಾಂಕ್ಷಿ ಯೋಜನೆಗೆ ನಟ ಪುನೀತ್ ರಾಜ್‌ಕುಮಾರ್ ಅವರ ರಾಯಭಾರಿಯಾಗಲು ಮುಂದೆ ಬಂದ ಹಿನ್ನೆಲೆಯಲ್ಲಿ ನಿಗಮದ ಅಧ್ಯಕ್ಷ ಮುರುಳೀಧರ ಹಾಲಪ್ಪ ಮೇ 15ರಂದು ನಡೆಯಲಿರುವ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನ ನೀಡಿದರು.







