ದಾದಿಯರು ಮಾನವೀಯ ವೌಲ್ಯಗಳನ್ನು ರೂಢಿಸಿಕೊಳ್ಳಲಿ: ಸಚಿವ ಯು.ಟಿ.ಖಾದರ್
ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿ ಪ್ರದಾನ

ಬೆಂಗಳೂರು, ಮೇ 13: ಶುಶ್ರೂಷಕಿಯರು ಮಾನವೀಯ ಮೌಲ್ಯಗಳನ್ನು ರೂಢಿಸಿಕೊಳ್ಳುವ ಮೂಲಕ ಆಸ್ಪತ್ರೆಗೆ ಬರುವ ರೋಗಿಗಳಿಗೆ ಉತ್ತಮ ಚಿಕಿತ್ಸೆ ಒದಗಿಸಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ. ಖಾದರ್ ಕರೆ ನೀಡಿದ್ದಾರೆ.
ಗುರುವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಂಗ್ಲೋ ಇಂಡಿಯನ್ ಯುನಿಟಿ ಸೆಂಟರ್ ಆಶ್ರಯದಲ್ಲಿ ಏರ್ಪಡಿಸಿದ್ದ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.
ಎಲ್ಲ ಶುಶ್ರೂಷಕಿಯರು ತಮ್ಮ ತರಬೇತಿ ಅವಧಿಯಲ್ಲೆ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು. ಸರಕಾರಿ ಆಸ್ಪತ್ರೆಗಳಿಗೆ ಬರುವ ಬಡರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡುವಂತಾಗಬೇಕು ಎಂದು ಅವರು ಇದೇ ವೇಳೆ ಸಲಹೆ ನೀಡಿದರು.
ಸರಕಾರಿ ಆಸ್ಪತ್ರೆಗಳಲ್ಲಿ ತಾತ್ಕಾಲಿಕ ಸೇವೆಯಲ್ಲಿರುವ ಶುಶ್ರೂಷಕಿಯರ ಖಾಯಂ ನೇಮಕಾತಿ ಸಂದರ್ಭದಲ್ಲಿ ಕೃಪಾಂಕ ನೀಡುವ ಬಗ್ಗೆ ಸರಕಾರ ಪರಿಶೀಲಿಸುತ್ತಿದೆ ಎಂದ ಅವರು, ದಾದಿಯರು ತಮ್ಮ ಶಿಕ್ಷಣ ಮತ್ತು ತರಬೇತಿ ಸಂದರ್ಭದಲ್ಲಿ ಕನ್ನಡವನ್ನು ಕಲಿಯಬೇಕು. ಇದರಿಂದ ರೋಗಿಗಳೊಂದಿಗೆ ಸಂವಹನ ನಡೆಸಲು ಅನುಕೂಲ ಆಗಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಉತ್ತಮ ಸೇವೆ ಸಲ್ಲಿಸಿದ ದಾದಿಯರಿಗೆ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮಾಜಿ ಶಾಸಕ ಹಾಗೂ ನೈಟಿಂಗೇಲ್ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷ ಐವಾನ್ ನಿಗ್ಲಿ, ಶಾಸಕಿ ವಿನಿಶಾ ನಿರೋ ಹಾಗೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.







