ರಾಜ್ಯಕ್ಕೆ ಉತ್ತರಪ್ರದೇಶದ ವಿಶೇಷ ತನಿಖಾ ತಂಡ ಭೇಟಿ: ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಪರಮೇಶ್ವರ್ ಚರ್ಚೆ

ಬೆಂಗಳೂರು, ಮೇ 19: ರಾಜ್ಯದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಆಯುಕ್ತರಾಗಿದ್ದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿಯ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶದ ವಿಶೇಷ ತನಿಖಾ ತಂಡ(ಎಸ್‌ಐಟಿ) ಬೆಂಗಳೂರಿಗೆ ಭೇಟಿ ನೀಡಿದೆ.
ಎಸ್‌ಐಟಿ ಭೇಟಿಗೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಶುಕ್ರವಾರ ವಿಕಾಸಸೌಧದಲ್ಲಿನ ತಮ್ಮ ಕಚೇರಿಯಲ್ಲಿ ನಗರ ಪೊಲೀಸ್ ಆಯುಕ್ತ ಪ್ರವೀಣ್‌ಸೂದ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪ್ರಕರಣದ ಕುರಿತು ಮಾಹಿತಿಯನ್ನು ಪಡೆದುಕೊಂಡರು.
ಅನುರಾಗ್ ತಿವಾರಿ ಸಾವಿನ ಹಿಂದೆ ಹಗರಣವೊಂದರ ಕೈವಾಡವಿರುವ ಆರೋಪಕ್ಕೆ ಸಂಬಂಧಿಸಿದಂತೆ ಯಾವುದಾದರೂ ಮಾಹಿತಿಗಳಿದ್ದರೆ ಉತ್ತರಪ್ರದೇಶ ಸರಕಾರ ನಮ್ಮ ರಾಜ್ಯ ಸರಕಾರಕ್ಕೆ ಮಾಹಿತಿ ನೀಡಲಿ, ನಾವು ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ನಗರದ ಗಾಲ್ಫ್‌ಕೋರ್ಸ್ ರಸ್ತೆಯಲ್ಲಿರುವ ಮಾಜಿ ಸಚಿವ ಅಂಬರೀಶ್ ನಿವಾಸಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನುರಾಗ್ ತಿವಾರಿ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವುದಾದರೆ ಅದಕ್ಕೆ ನಮ್ಮ ಆಕ್ಷೇಪವಿಲ್ಲ ಎಂದು ಸ್ಪಷ್ಟಪಡಿಸಿದರು.







