22,308 ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ: ಎಚ್.ಆಂಜನೇಯ

ಬೆಂಗಳೂರು, ಮೇ 20: ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಮತ್ತು ಅವುಗಳ ವ್ಯಾಪ್ತಿಯಲ್ಲಿ ಬರುವ ನಿಗಮಗಳಲ್ಲಿ ಖಾಲಿ ಇರುವ 22,308 ಬ್ಯಾಕ್‌ಲಾಗ್ ಹುದ್ದೆಗಳನ್ನು ತುಂಬುವ ಉದ್ಯೋಗ ಪರ್ವವು ರಾಜ್ಯದ ನಿರುದ್ಯೋಗಿಗಳಿಗೆ ಅವಕಾಶದ ಬಾಗಿಲು ತೆರೆಯಲಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ತಿಳಿಸಿದ್ದಾರೆ.
ಶನಿವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಹಲವು ವರ್ಷಗಳಿಂದ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ಜನಕಲ್ಯಾಣ ಕಾರ್ಯಕ್ರಮಗಳನ್ನು ಸಮಾಜದ ಎಲ್ಲ ವರ್ಗಗಳಿಗೂ ತಲುಪಿಸಲು ಸರಕಾರ ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಈ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ ಎಂದರು.
ಜಿಲ್ಲಾಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ವಸತಿ ಶಾಲೆಗಳ ಪ್ರಾಂಶುಪಾಲರು, ಶಿಕ್ಷಕರು, ವಿದ್ಯಾರ್ಥಿ ನಿಲಯಗಳ ನಿಲಯಪಾಲಕರು, ಪ್ರಥಮ ದರ್ಜೆ ಸಹಾಯಕರು ಹಾಗೂ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳನ್ನು ಕೆಪಿಎಸ್ಸಿ ಮೂಲಕ ಭರ್ತಿ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.
ಅಡುಗೆಯವರು, ಅಡುಗೆ ಸಹಾಯಕರು, ರಾತ್ರಿ ಕಾವಲುಗಾರರು, ಸ್ವಚ್ಛತಾ ಸಿಬ್ಬಂದಿಯನ್ನು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಧ್ಯಕ್ಷತೆಯ ಸಮಿತಿಯ ಮೂಲಕ ಭರ್ತಿ ಮಾಡುವ ಪಾರದರ್ಶಕ ವಿಧಾನವನ್ನು ಅಳವಡಿಸಿಕೊಳ್ಳಲಾಗಿದೆ ಎಂದು ಆಂಜನೇಯ ತಿಳಿಸಿದರು.
ವಿದ್ಯಾಕ್ಷೇತ್ರಕ್ಕೆ ರಾಜ್ಯ ಸರಕಾರವು ನೀಡಿರುವ ಆದ್ಯತೆಯ ಪರಿಣಾಮವಾಗಿ ಅತ್ಯಂತ ಹೆಚ್ಚು ಹುದ್ದೆಗಳನ್ನು ‘ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ’ದಲ್ಲಿ ತುಂಬಲಾಗುತ್ತಿದೆ. 15,383 ಹುದ್ದೆಗಳು ಮಂಜೂರಾಗಿದ್ದು, 4226 ಹುದ್ದೆಗಳನ್ನು ತುಂಬಲಾಗಿದೆ. ಈ ವರ್ಷ ಆರಂಭವಾಗಲಿರುವ ವಸತಿ ಶಾಲೆಗಳ ನೇಮಕಾತಿಯು ಸೇರಿ ಒಟ್ಟು 13,205 ಹುದ್ದೆಗಳ ನೇಮಕಾತಿಗೆ ಪ್ರಕ್ರಿಯೆ ಆರಂಭವಾಗಿದ್ದು, ಈ ಪೈಕಿ 4122 ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಡಲು ಕೆಪಿಎಸ್ಸಿಗೆ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ ಎಂದು ಅವರು ಹೇಳಿದರು.
ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಮಂಜೂರಾಗಿರುವ 16,312 ಹುದ್ದೆಗಳ ಪೈಕಿ, 7,348 ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು, ಖಾಲಿ ಇರುವ 8,964 ಹುದ್ದೆಗಳ ಪೈಕಿ, 3,841 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಆರಂಭವಾಗಿದೆ. ಸಮಾಜ ಕಲ್ಯಾಣ ಇಲಾಖೆಯ 760 ಹುದ್ದೆಗಳನ್ನು ತುಂಬಲು ಕೆಪಿಎಸ್ಸಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ನೇಮಕಾತಿ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಆಂಜನೇಯ ತಿಳಿಸಿದರು.
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ 2500 ಹುದ್ದೆಗಳ ಪೈಕಿ 752 ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು, 1748 ಹುದ್ದೆಗಳು ಖಾಲಿ ಇವೆ. ಅವುಗಳಲ್ಲಿ 948 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಕೆಪಿಎಸ್ಸಿ ಹಾಗೂ ಇಲಾಖಾ ಹಂತಗಳಲ್ಲಿ ಪ್ರಕ್ರಿಯೆ ಆರಂಭವಾಗಿವೆ ಎಂದು ಅವರು ಹೇಳಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಒಟ್ಟು 13,871 ವಿವಿಧ ವೃಂದದ ಹುದ್ದೆಗಳು ಮಂಜೂರಾಗಿದ್ದು, 5,358 ಹುದ್ದೆಗಳು ಭರ್ತಿಯಾಗಿವೆ. ಖಾಲಿ ಇರುವ 8,513 ಹುದ್ದೆಗಳಲ್ಲಿ 5,296 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಅನುಮತಿ ನೀಡಿದ್ದು, ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲಾಗಿದೆ ಎಂದು ಆಂಜನೇಯ ತಿಳಿಸಿದರು.







