ಅಕ್ಕಿ ಖರೀದಿಯಲ್ಲಿ ಎರಡು ಸಾವಿರ ಕೋಟಿ ಭ್ರಷ್ಟಾಚಾರ: ಕರಂದ್ಲಾಜೆ
.jpeg)
ಉಡುಪಿ, ಮೇ 20: ರಾಜ್ಯದ ಕಾಂಗ್ರೆಸ್ ಸರಕಾರ ವ್ಯಾಪಕ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಛತ್ತೀಸ್‌ಗಢದಿಂದ ಅಕ್ಕಿ ಖರೀದಿ ವ್ಯವಹಾರದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯಿಂದ 2 ಸಾವಿರ ಕೋಟಿ ರೂ.ಗಳ ಭ್ರಷ್ಟಾಚಾರ ನಡೆದಿರುವ ಬಗ್ಗೆ ಮಾಹಿತಿಗಳಿವೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.
ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಶನಿವಾರ ಜರಗಿದ ಜಿಲ್ಲೆಯ ಬಿಜೆಪಿ ಪದಾಧಿ ಕಾರಿಗಳು ಮತ್ತು ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡು ತ್ತಿದ್ದರು. ಮೇ 18ರಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವ ದಲ್ಲಿ ಆರಂಭಗೊಂಡ ಬರ ಅಧ್ಯಯನ ಪ್ರವಾಸ ನಿರೀಕ್ಷೆಗೂ ಮೀರಿ ಯಶಸ್ಸು ಕಾಣುತ್ತಿದೆ. ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಜವಾಬ್ದಾರಿಯುತ ಪದಾಧಿಕಾರಿಗಳು, ಕಾರ್ಯಕರ್ತರು ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕು. ಚುನಾವಣಾ ವರ್ಷದಲ್ಲಿ ಸಂಘಟನಾ ಪರ್ವ ಬಿರುಸಾಗಿ ನಡೆಯಬೇಕೆಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಮಾತನಾಡಿ ಯಡಿಯೂರಪ್ಪ ಅವರ ಉಡುಪಿ ಜಿಲ್ಲಾ ಪ್ರವಾಸ ಜೂ.23ರಂದು ನಿಗಧಿಯಾಗಿದೆ. ಅವರ ಜಿಲ್ಲಾ ಪ್ರವಾಸವನ್ನು ಯಶಸ್ವಿಯಾಗಿ ನಿರ್ವಹಿಸಬೇಕು ಎಂದು ಹೇಳಿದರು.
ರಾಜ್ಯ ಕಾರ್ಯದರ್ಶಿ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ, ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ವಿಧಾನಸಭಾ ವಿಪಕ್ಷ ಮುಖ್ಯ ಸಚೇತಕ ವಿ.ಸುನಿಲ್ ಕುಮಾರ್, ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಶ್ಯಾಮಲಾ ಎಸ್.ಕುಂದರ್, ಜಿಪಂ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಶೆಟ್ಟಿ, ಮಾಜಿ ಶಾಸಕರಾದ ರಘುಪತಿ ಭಟ್, ಲಾಲಾಜಿ ಮೆಂಡನ್ ಮೊದಲಾದವರು ಉಪಸ್ಥಿತರಿದ್ದರು.







