ಕೊಯ್ನಾ ನದಿಯಿಂದ ಕೃಷ್ಣೆಗೆ ನೀರು: ಮಹಾರಾಷ್ಟ್ರ ಸರಕಾರ ಆದೇಶ

ಬೆಂಗಳೂರು, ಮೇ 21: ಕೊಯ್ನಾ ನದಿಯಿಂದ ಕೃಷ್ಣಾ ನದಿಗೆ ಎರಡೂವರೆ ಟಿ.ಎಂ.ಸಿ. ನೀರು ಬಿಡುಗಡೆ ಮಾಡಲು ಮಹಾರಾಷ್ಟ್ರ ಸರ್ಕಾರ ಆದೇಶಿಸಿದೆ.
ಉನ್ನತ ಮೂಲಗಳು ಈ ವಿಷಯವನ್ನು ತಿಳಿಸಿದ್ದು, ಮಹಾರಾಷ್ಟ್ರ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಇಂದು ಮಧ್ಯರಾತ್ರಿ ಅಥವಾ ನಾಳೆ ನೀರು ಬಿಡಲಾಗುತ್ತದೆ ಎಂದು ತಿಳಿದುಬಂದಿದೆ.
ಕರ್ನಾಟಕದ ಬಿಜಾಪುರ, ಬಾಗಲಕೋಟೆ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಕುಡಿಯುವ ನೀರಿನ ತೀವ್ರ ಕೊರತೆ ಇರುವ ಹಿನ್ನೆಲೆಯಲ್ಲಿ ಕೊಯ್ನಾ ನದಿಯಿಂದ ನೀರು ಬಿಡುಗಡೆಯಾಗುತ್ತಿದೆ. ಆ ಮೂಲಕ ಉಭಯ ಜಿಲ್ಲೆಗಳ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಲಿದೆ.
ಮಹಾರಾಷ್ಟ್ರದ ಕೊಯ್ನಾ ನದಿಯಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡಿಸುವಂತೆ ಕೇಂದ್ರ ಸಚಿವರಾದ ಅನಂತಕುಮಾರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಮನವಿ ಮಾಡಿದ್ದರು. ಈ ಮನವಿಗೆ ತಕ್ಷಣವೇ ಸ್ಪಂದಿಸಿದ ಅನಂತಕುಮಾರ್ ಅವರು, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಜತೆ ಮಾತುಕತೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ನೀರು ಬಿಡುಗಡೆ ಸಂಬಂಧ ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದ್ದು, ಇದರಿಂದಾಗಿ ಬಿಜಾಪುರ, ಬಾಗಲಕೋಟೆ ಜಿಲ್ಲೆಗಳ ಜನ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.







