ಅವಧಿಗೆ ಮೊದಲೆ ಚುನಾವಣೆ ಎದುರಿಸಲು ಜೆಡಿಎಸ್ ಸಿದ್ಧ: ದೇವೇಗೌಡ

ಬೆಂಗಳೂರು, ಮೇ 25: ರಾಜ್ಯದಲ್ಲಿ ಅವಧಿಗೂ ಮೊದಲೇ ವಿಧಾನಸಭೆ ಚುನಾವಣೆ ನಡೆದರೆ ಅದನ್ನು ಎದುರಿಸಲು ನಾವು ಸಿದ್ಧವಾಗಿದ್ದೇವೆ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಇಂದಿಲ್ಲಿ ತಿಳಿಸಿದ್ದಾರೆ.
ಗುರುವಾರ ಹೊಸದಿಲ್ಲಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಅವಧಿಗೂ ಮುನ್ನ ಚುನಾವಣೆ ನಡೆದರೆ ನಮ್ಮದೇನೂ ಅಭ್ಯಂತರವಿಲ್ಲ. ಚುನಾವಣೆ ಎದುರಿಸಲು ಜೆಡಿಎಸ್ ಪಕ್ಷ ಸನ್ನದ್ಧವಾಗಿದೆ. 2018ರ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ-ಕಾಂಗ್ರೆಸ್ ಸಮೀಕ್ಷೆ ನಡೆಸುತ್ತಿವೆ.
ಆದರೆ, ರಾಜ್ಯದ ಜನತೆ ಜೆಡಿಎಸ್‌ಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪೂರ್ಣ ಬಹುಮತ ನೀಡಲಿದ್ದಾರೆಂಬ ವಿಶ್ವಾಸವಿದೆ. ಆ ನಿಟ್ಟಿನಲ್ಲಿ ಅಭ್ಯರ್ಥಿಗಳ ಆಯ್ಕೆ ದೃಷ್ಟಿಯಿಂದ ಪಕ್ಷ ಸಂಘಟನೆ ಕೈಗೊಳ್ಳಲಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ ಎಂದರು.
ಸಭೆಗೆ ಪುಟ್ಟರಾಜು: ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಜಾತ್ಯತೀತ ಪಕ್ಷಗಳು ಸೇರಿದಂತೆ ಎಲ್ಲ ಪ್ರಾದೇಶಿಕ ಪಕ್ಷಗಳ ಸಭೆ ಕರೆದಿದ್ದು, ಆ ಸಭೆಗೆ ನಮ್ಮ ಪಕ್ಷದ ಸಂಸದ ಸಿ.ಎಸ್.ಪುಟ್ಟರಾಜು ತೆರಳಲಿದ್ದಾರೆ. ಯಾರನ್ನೇ ಅಭ್ಯರ್ಥಿ ಮಾಡಿದರೂ ನಮ್ಮ ಬೆಂಬಲವಿದೆ ಎಂದು ಅವರು ಪ್ರಕಟಿಸಿದರು.
ತಮ್ಮ ಕುಟುಂಬದ ಮೇಲೆ 20 ಸಾವಿರ ಕೋಟಿ ರೂ. ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ವೆಂಕಟೇಶ್ ಗೌಡ ಎಂಬವರು ಆದಾಯ ತೆರಿಗೆ ಇಲಾಖೆಗೆ ದೂರು ನೀಡಿರುವ ಬಗ್ಗೆ ತಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ದೇವೇಗೌಡ ನಿರಾಕರಿಸಿದರು.
ಜೆಡಿಎಸ್ ವರ್ಚಸ್ಸು ಕುಗ್ಗಿಸಲು ಬಿಜೆಪಿ ಮುಖಂಡರು ತಮ್ಮ ಕುಟುಂಬದ ವಿರುದ್ಧ ಆರೋಪ ಮಾಡುವ ಮೂಲಕ ಷಡ್ಯಂತ್ರ ನಡೆಸಿದ್ದಾರೆ. ಈ ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ. ಈ ಸಂಬಂಧ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಈ ಬಗ್ಗೆ ಪ್ರತಿಕ್ರಿಯಿಸುವ ಅಗತ್ಯವಿರಲಿಲ್ಲ ಎಂದು ಅವರು ಹೇಳಿದರು.







