ಕೆಪಿಸಿಸಿ ಅಧ್ಯಕ್ಷ ಸ್ಥಾನ : ಮೇ 31ರೊಳಗೆ ಅಂತಿಮ ನಿರ್ಧಾರ ಕೆ.ಸಿ.ವೇಣುಗೋಪಾಲ್

ಬೆಂಗಳೂರು, ಮೇ 25: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಸ್ಥಾನ ಬದಲಾವಣೆ ಸಂಬಂಧ ಇದೇ ತಿಂಗಳ 31ರೊಳಗೆ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಸ್ಪಷ್ಟಪಡಿಸಿದ್ದಾರೆ.
ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ 2018ರ ವಿಧಾನಸಭಾ ಚುನಾವಣೆಯನ್ನು ಯಾರ ನಾಯಕತ್ವದಲ್ಲಿ ಎದುರಿಸುತ್ತೇವೆ ಎಂಬುದು ಸೇರಿದಂತೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆಯೂ ನಿರ್ಧಾರ ಪ್ರಕಟಿಸಲಿದ್ದೇವೆ ಎಂದು ಘೋಷಿಸಿದರು.
ಪರಮೇಶ್ವರ್ ಮುಂದುವರಿಕೆ?: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಬದಲಾವಣೆಯಿಂದ ಆಗಬಹುದಾದ ಸಾಧಕ-ಬಾಧಕಗಳನ್ನು ಪರಿಶೀಲಿಸಿರುವ ವೇಣುಗೋಪಾಲ್, ಈ ಸಂಬಂಧ ವರಿಷ್ಠರಿಗೆ ಮಾಹಿತಿ ನೀಡಲಿದ್ದಾರೆ.
ಆ ಬಳಿಕ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಪಕ್ಷದ ಹಿರಿಯ ಮುಖಂಡರನ್ನು ಹೊಸದಿಲ್ಲಿಗೆ ಕರೆಸಿಕೊಂಡು ವರಿಷ್ಠರು ಅಧ್ಯಕ್ಷ ಸ್ಥಾನದ ಬಗ್ಗೆ ಮುಂದಿನ ತೀರ್ಮಾನ ಪ್ರಕಟಿಸುವ ಸಾಧ್ಯತೆಗಳಿವೆ.
ಈ ಮಧ್ಯೆಯೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಇಂಧನ ಸಚಿವ ಡಿ.ಕೆ.ಶಿವಕುಮಾರ್, ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್, ಹಿರಿಯ ಮುಖಂಡ ಎಸ್.ಆರ್. ಪಾಟೀಲ್ ಮತ್ತು ಸಂಸದ ಕೆ.ಎಚ್.ಮುನಿಯಪ್ಪ ಸೇರಿದಂತೆ ಹಲವು ನಾಯಕರು ಹೈಕಮಾಂಡ್ ಮಟ್ಟದಲ್ಲಿ ತೀವ್ರ ಕಸರತ್ತು ನಡೆಸಿದ್ದಾರೆ.
ಆದರೆ, ರಾಜ್ಯದಲ್ಲಿ ದಲಿತ ಸಮುದಾಯದ ಸಂಖ್ಯೆ ಹೆಚ್ಚಿರುವ ಸಮೀಕ್ಷಾ ವರದಿಯ ಅಂಕಿ-ಸಂಖ್ಯೆಗಳು ಬಹಿರಂಗಗೊಂಡಿರುವ ಹಿನ್ನೆಲೆಯಲ್ಲಿ ಪ್ರಸಕ್ತ ಸಂದರ್ಭದಲ್ಲಿ ಡಾ.ಪರಮೇಶ್ವರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಬದಲಾವಣೆ ಮಾಡದೆ, ಅವರನ್ನು ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.
ಅಲ್ಲದೆ, ರಾಜ್ಯ ಬಿಜೆಪಿಯೂ ದಲಿತ ಸಮುದಾಯದ ಮತಗಳನ್ನು ಸೆಳೆಯುವ ನಿಟ್ಟಿನಲ್ಲಿ ದಲಿತರ ಮನೆಗಳಲ್ಲಿ ಊಟ-ಉಪಾಹಾರ ಮಾಡುವ ಮೂಲಕ ಪ್ರಚಾರ ಕೈಗೊಂಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಪರಮೇಶ್ವರ್ ಅವರ ಬದಲಾವಣೆ ಪಕ್ಷಕ್ಕೆ ದಲಿತ ಮತಗಳು ಕೈತಪ್ಪುವ ಸಾಧ್ಯತೆಗಳನ್ನು ಅಲ್ಲಗಳೆಯಲಾಗದು.
ಲಿಂಗಾಯತರ ಸಮುದಾಯದವರಿಗೆ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ಭಾರೀ ಚರ್ಚೆ ನಡೆಯುತ್ತಿತ್ತು. ಆದರೆ, ಈಗಾಗಲೇ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷರಾಗಿ ಲಿಂಗಾಯತ ಸಮುದಾಯದ ಲಕ್ಷ್ಮಿ ಹೆಬ್ಬಾಳ್ಕರ್, ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಬಸನಗೌಡ ಬಾರ್ದಲಿ ಆಯ್ಕೆಯಾಗಿದ್ದಾರೆ.
ಆ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಡಾ.ಜಿ.ಪರಮೇಶ್ವರ್ ಅವರನ್ನು ಮುಂದುವರಿಸುವ ಬಗ್ಗೆ ಹೈಕಮಾಂಡ್ ಒಲವು ಹೊಂದಿದೆ ಎಂದು ಹೇಳಲಾಗಿದೆ. ಆದರೂ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾರು ನಿಯೋಜನೆಗೊಳ್ಳಲಿದ್ದಾರೆಂಬುದು ಕಾಂಗ್ರೆಸ್ ವಲಯದಲ್ಲಿ ಕುತೂಹಲ ಮೂಡಿಸಿದೆ.







