ಗೋಹತ್ಯೆ ನಿಷೇಧ: ಕೇಂದ್ರದ ಆದೇಶ ಕೈ ಸೇರಿದ ಬಳಿಕ ಕ್ರಮ: ಸಿದ್ದರಾಮಯ್ಯ

ಹೊಸದಿಲ್ಲಿ, ಮೇ 29: ದೇಶಾದ್ಯಂತ ಗೋಹತ್ಯೆ ನಿಷೇಧಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಹೊರಡಿಸಿರುವ ಆದೇಶ ನಮ್ಮ ಕೈ ಸೇರಿದ ಬಳಿಕವಷ್ಟೇ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸೋಮವಾರ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ 1964ರಿಂದಲೂ ಗೋಹತ್ಯೆ ನಿಷೇಧಕ್ಕೆ ಸಂಬಂಧಿಸಿದ ಕಾನೂನು ಜಾರಿಯಲ್ಲಿದೆ. ಆದರೆ, ಈಗ ಕೇಂದ್ರ ಸರಕಾರವು ಕೆಲವು ನಿಯಮಗಳನ್ನು ಬದಲಾಯಿಸಿ ಸುತ್ತೋಲೆಯನ್ನು ಹೊರಡಿಸಿದೆ ಎಂದರು.
ಕೇಂದ್ರದ ಆದೇಶ ನಮ್ಮ ಕೈಸೇರಿದ ಬಳಿಕ ಅದನ್ನು ಕಾನೂನಾತ್ಮಕವಾಗಿ ಪರಿಶೀಲನೆ ನಡೆಸುತ್ತೇವೆ. ಆನಂತರವಷ್ಟೇ ಈ ಬಗ್ಗೆ ಪ್ರತಿಕ್ರಿಯೆ ನೀಡಲು ಸಾಧ್ಯ ಎಂದ ಸಿದ್ದರಾಮಯ್ಯ, ಕೇರಳದಲ್ಲಿ ಗೋಹತ್ಯೆ ನಿಷೇಧವನ್ನು ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದರು.
Next Story





