ದ್ವಿತೀಯ ಪಿ.ಯು.ಸಿ. ಪರೀಕ್ಷೆ : ಶೇ.100 ಫಲಿತಾಂಶಕ್ಕೆ ಸಲಹೆ
ಮಡಿಕೇರಿ ಜೂ.9: ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇನ್ನಷ್ಟು ಉತ್ತಮ ಸಾಧನೆ ಮಾಡುವತ್ತ ಶ್ರಮಿಸಬೇಕು. ಎಲ್ಲಾ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪಿಯು ಕಾಲೇಜುಗಳು ಶೇ.100ರಷ್ಟು ಫಲಿತಾಂಶ ಪಡೆಯಲು ಈಗಿನಿಂದಲೇ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ನಿರ್ದೇಶನ ನೀಡಿದ್ದಾರೆ. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವಿವಿದ್ಧೋದ್ದೇಶ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಪಠ್ಯಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಜಿಲ್ಲೆಯ ಕೆಲವು ಅನುದಾನಿತ ಮತ್ತು ಸರಕಾರಿ ಕಾಲೇಜುಗಳಲ್ಲಿ ಶೇ.50ಕ್ಕಿಂತ ಕಡಿಮೆ ಫಲಿತಾಂಶ ಬಂದಿದ್ದು, ಇಂತಹ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಸಂಬಂಧಪಟ್ಟ ವಿಷಯ ಉಪನ್ಯಾಸಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಫಲಿತಾಂಶ ಕಡಿಮೆ ಬಂದಿರುವ ಕಾಲೇಜುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಭೇಟಿ ನೀಡಿ ಪರಿಶೀಲನೆ ಮಾಡುವಂತೆ ಜಿಲ್ಲಾಧಿಕಾರಿ ನೀಡಿದರು
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಟಿ.ಸ್ವಾಮಿ ಅವರು ಪ್ರಥಮ ಪಿಯುಸಿ, ವಾಣಿಜ್ಯ ವಿಜ್ಞಾನ, ಆರ್ಥಿಕ ವಿಜ್ಞಾನ, ಲೆಕ್ಕ ಶಾಸ್ತ್ರ, ವ್ಯವಹಾರ ಅಧ್ಯಯನ ಪುಸ್ತಕಗಳನ್ನು ವಿತರಿಸಲಾಗುತ್ತದೆ ಎಂದು ಅವರು ತಿಳಿಸಿದರು. ಪದವಿ ಪೂರ್ವ ಶಿಕ್ಷಣವು ವಿದ್ಯಾರ್ಥಿ ಜೀವನದಲ್ಲಿ ಮುಖ್ಯ ಘಟ್ಟವಾಗಿದ್ದು, ಅದನ್ನು ಅರಿತು ಜಿಲ್ಲೆಯ ಎಲ್ಲಾ ಕಾಲೇಜುಗಳಲ್ಲಿ ಶೇ.100ರಷ್ಟು ಫಲಿತಾಂಶ ಪಡೆಯಲು ಶ್ರಮಿಸಬೇಕು ಎಂದು ಅವರು ಹೇಳಿದರು.
ಪ್ರಾಂಶುಪಾಲ ಸಂಘದ ಅಧ್ಯಕ್ಷರಾದ ಕೆಂಚಪ್ಪ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಬೆಳ್ಯಪ್ಪ, ಐಟಿಡಿಪಿ ಇಲಾಖಾ ಅಧಿಕಾರಿ ಪ್ರಕಾಶ್ ಇತರರು ಹಾಜರಿದ್ದರು.







