ಚುನಾವಣಾ ಪ್ರಚಾರಕ್ಕೆ ಬಾಲ ಕಾರ್ಮಿಕರ ಬಳಕೆ ಶಿಕ್ಷಾರ್ಹ ಅಪರಾಧ: ಸಚಿವ ಸಂತೋಷ್ ಲಾಡ್
ಬೆಂಗಳೂರು, ಜೂ. 12: ಚುನಾವಣಾ ಪ್ರಚಾರ ಕಾರ್ಯಕ್ಕೆ ಬಾಲ ಕಾರ್ಮಿಕರನ್ನು ಬಳಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾ ಗಿದ್ದು, ಈ ಸಂಬಂಧ ದೂರುಗಳು ಬಂದರೆ ಅದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಭರವಸೆ ನೀಡಿದ್ದಾರೆ.
ಸೋಮವಾರ ವಿಧಾನಸಭೆಯಲ್ಲಿ ಜೆಡಿಎಸ್ ಸದಸ್ಯ ಶಿವಲಿಂಗೇಗೌಡ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರ ನೀಡುವ ವೇಳೆ ಬಿಜೆಪಿಯ ಲಕ್ಷ್ಮಣ ಸವದಿ ಕೇಳಿದ ಉಪ ಪ್ರಶ್ನೆಗೆ ಉತ್ತರ ನೀಡಿದರು. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ ಯಾವುದೇ ಪಕ್ಷಗಳು ಚುನಾವಣಾ ಪ್ರಚಾರ ಕಾರ್ಯಕ್ಕೆ ಬಾಲ ಕಾರ್ಮಿಕರನ್ನು ಬಳಸಿಕೊಳ್ಳುವುದು ಅಪರಾಧ ಎಂದರು.
ಕಾಯ್ದೆ ಜಾರಿಗೆ: ಬಾಲ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳುವುದು ಶಿಕ್ಷಾರ್ಹ ಅಪರಾಧ ಎಂಬ ಕಾಯ್ದೆಯನ್ನು ಜಾರಿಗೆ ತರಲಾಗಿದ್ದು, ಅನಿಷ್ಟ ಪದ್ಧತಿಯ ನಿರ್ಮೂಲನೆಗೆ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ ಎಂದು ಸಂತೋಷ್ ಲಾಡ್ ಸ್ಪಷ್ಟಪಡಿಸಿದರು.
ಮುಂದಿನ 5 ವರ್ಷಗಳಲ್ಲಿ ರಾಜ್ಯದಲ್ಲಿ ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣ ನಿರ್ಮೂಲನೆ ಮಾಡಬೇಕೆಂಬ ಗುರಿ ಹಾಕಿಕೊಂಡಿದ್ದು, ಈ ಸಂಬಂಧ ಬಜೆಟ್‌ನಲ್ಲಿ ಘೋಷಣೆಯನ್ನು ಮಾಡಲಾಗಿದೆ. ಅದರಂತೆ ಈಗಾಗಲೆ ಜಿಲ್ಲಾವಾರು ಸಮೀಕ್ಷೆ ಮಾಡಲಾಗುತ್ತಿದೆ ಎಂದರು.
ಬಾಲ ಕಾರ್ಮಿಕರ ನೇಮಕದ ಬಗ್ಗೆ ನಿಗಾ ವಹಿಸಲು ಮೊಬೈಲ್ ಆ್ಯಪ್ ಸಿದ್ದಪಡಿಸಲಾಗಿದೆ. ಬಾಲ ಕಾರ್ಮಿಕರನ್ನು ದುಡಿಮೆಯಿಂದ ಹೊರ ಕರೆತಂದು ಅವರ ಕುಟುಂಬಕ್ಕೆ ಆರ್ಥಿಕ ನೆರವು ನೀಡುವ ವಿಚಾರವೂ ಪರಿಶೀಲನೆಯಲ್ಲಿದೆ ಎಂದು ಅವರು ತಿಳಿಸಿದರು.
ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಇಲಾಖೆಯೊಂದಿಗೆ ಜನ ಪ್ರತಿನಿಧಿಗಳು, ಸಾರ್ವಜನಿಕರು ಸಹಕರಿಸಬೇಕು ಎಂದ ಅವರು, ಬಾಲ ಕಾರ್ಮಿಕರನ್ನು ನೇಮಕ ಮಾಡಿಕೊಂಡ ಆರೋಪಗಳ ಹಿನ್ನೆಲೆಯಲ್ಲಿ 2016-17ನೆ ಸಾಲಿನಲ್ಲಿ 44 ಕೇಸುಗಳನ್ನು ದಾಖಲಿಸಲಾಗಿದ್ದು, ಈ ಪೈಕಿ 12 ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಿದೆ ಎಂದರು.







