‘ಸಾಲಮನ್ನಾ’ ಸಿಎಂ ಉತ್ತರಿಸಲಿದ್ದಾರೆ: ಕಾನೂನು ಸಚಿವ ಜಯಚಂದ್ರ

ಬೆಂಗಳೂರು, ಜೂ. 12: ಬರ ಸ್ಥಿತಿ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಾಲಮನ್ನಾ ಸಂಬಂಧ ಇಲಾಖಾ ಬೇಡಿಕೆಗಳ ಮೇಲಿನ ಚರ್ಚೆಗೆ ಉತ್ತರ ನೀಡುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟಪಡಿಸಲಿದ್ದಾರೆಂದು ಕಾನೂನು ಸಚಿವ ಜಯಚಂದ್ರ ತಿಳಿಸಿದ್ದಾರೆ.
ಸೋಮವಾರ ವಿಧಾನಸಭೆ ಶೂನ್ಯವೇಳೆಯಲ್ಲಿ ಜೆಡಿಎಸ್ ಸದಸ್ಯ ಎನ್.ಎಚ್. ಕೋನರೆಡ್ಡಿ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರ ನೀಡಿದ ಅವರು, ವಿವಿಧ ಇಲಾಖಾ ಬೇಡಿಕೆಗಳ ಮೇಲೆ ವಿಸ್ತೃತ ಚರ್ಚೆ ಆಗುತ್ತಿದ್ದು, ಅದಕ್ಕೆ ಸಂಬಂಧಪಟ್ಟ ಸಚಿವರು ಮತ್ತು ಸಿಎಂ ಉತ್ತರ ಕೊಡುವ ವೇಳೆ ಸಾಲಮನ್ನಾ ಕುರಿತು ಗಮನಹರಿಸಲಿದ್ದಾರೆ ಎಂದರು.
ಆರಂಭಕ್ಕೆ ವಿಷಯ ಪ್ರಸ್ತಾಪಿಸಿದ ಕೋನರೆಡ್ಡಿ, ರೈತರ ಸಾಲಮನ್ನಾ, ನೀರಾವರಿ ಯೋಜನೆಗಳ ಅನುಷ್ಠಾನ, ಬಯಲುಸೀಮೆಗೆ ಶಾಶ್ವತ ನೀರಾವರಿ ಕಲ್ಪಿಸಲು ಆಗ್ರಹಿಸಿ ಕರ್ನಾಟಕ ಬಂದ್ ಕರೆ ನೀಡಲಾಗಿದೆ. ಈ ಬಗ್ಗೆ ರಾಜ್ಯ ಸರಕಾರ ಸ್ಪಷ್ಟ ಭರವಸೆ ನೀಡಬೇಕು ಎಂದು ಆಗ್ರಹಿಸಿದರು.
ಇದಕ್ಕೆ ಧ್ವನಿಗೂಡಿಸಿದ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ರೈತರ ಸಾಲಮನ್ನಾ ಮಾಡಬೇಕೆಂದು ಎಐಸಿಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ. ಹೀಗಾಗಿ ರಾಜ್ಯ ಸರಕಾರ, ಉತ್ತರ ಪ್ರದೇಶ, ಮಹಾರಾಷ್ಟ್ರ ಮಾದರಿಯಲ್ಲಿ ರೈತರ ಸಾಲಮನ್ನಾ ಘೋಷಣೆ ಮಾಡಬೇಕೆಂದು ಒತ್ತಾಯಿಸಿದರು.







