ಶಿಕ್ಷಣ ಮಾರಾಟದ ಸರಕಲ್ಲ: ಸುನೀಲ್ ಕುಮಾರ್ ಬಜಾಲ್
ಮಂಗಳೂರು, ಜೂ. 12: ಪ್ರತಿಯೊಂದು ದೇಶದ ಅಭಿವೃದ್ಧಿಯು ಆ ದೇಶವು ಶಿಕ್ಷಣ ಮತ್ತು ಉದ್ಯೋಗಕ್ಕೆ ನೀಡಿರುವ ಪ್ರಾಮುಖ್ಯತೆಯ ಆಧಾರದಲ್ಲಿ ನಿಂತಿದೆ. ಶಿಕ್ಷಣ ಸಾರ್ವತ್ರೀಕರಣಗೊಳ್ಳಬೇಕು, ಎಲ್ಲರಿಗೂ ಉಚಿತ ಕಡ್ಡಾಯ ಶಿಕ್ಷಣ ಸಿಗಬೇಕು, ಪ್ರಸ್ತುತ ಪರಿಸ್ಥಿತಿಯಲ್ಲಿ ಶಿಕ್ಷಣವೆಂಬುದು ಮಾರಾಟದ ಸರಕಾಗಿದೆ ಎಂದು ಸಿಐಟಿಯು ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಅಭಿಪ್ರಾಯಪಟ್ಟರು.
ಅವರು ನಗರದಲ್ಲಿ ಸಿಐಟಿಯು ಸಂಯೋಜಿತ ಬೀದಿಬದಿ ವ್ಯಾಪಾರಸ್ಥರ ಸಂಘ, ಹಮಾಲಿ ಕಾರ್ಮಿಕರ ಸಂಘ, ಆಟೋರಿಕ್ಷಾ ಚಾಲಕರ ಸಂಘಗಳ ಜಂಟಿ ಆಶ್ರಯದಲ್ಲಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.
ಹಣವುಳ್ಳವರಿಗೆ ಶಿಕ್ಷಣ, ಇಲ್ಲದವರಿಗೆ ಭಿಕ್ಷಾನ್ನ ಎಂಬಂತೆ ದೇಶದಲ್ಲಿ ವಾಸ್ತವ ಚಿತ್ರಣದೆ. ಇದರಿಂದ ಲಕ್ಷಾಂತರ ಮಕ್ಕಳು ಶಿಕ್ಷಣದಿಂದ ವಂಚಿತರಾಗಿ, ಭವಿಷ್ಯದ ಹರಿಕಾರರಾಗಬೇಕಾದ ಮಕ್ಕಳ ಬದುಕು ತೀರಾ ದುಸ್ತರವಾಗಿದೆ ಎಂದವರು ವಿಷಾದ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಪ್ರಕಾಶ್ ನಾಯಕ್ ಮಾತನಾಡಿ, ಶೈಕ್ಷಣಿಕವಾಗಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುವ ಮೂಲಕ ದೇಶದ ಹಿರಿಮೆಯನ್ನು ಬಾನೆತ್ತರಕ್ಕೆ ಕೊಂಡೊಯ್ಯಬೇಕೆಂದು ಶುಭ ಹಾರೈಸಿದರು.
ವೇದಿಕೆಯಲ್ಲಿ ಕೋರ್ಟ್ ವಾರ್ಡ್ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಕ್ವೀನಿ ಪರ್ಸಿ ಆನಂದ್, ಶಾಲಾ ಮಕ್ಕಳ ವಾಹನ ಚಾಲಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಅನ್ಸಾರ್, ಬೀದಿಬದಿ ವ್ಯಾಪಾರಸ್ಥರ ಸಂಘದ ಜಿಲ್ಲಾಧ್ಯಕ್ಷ ಮುಹಮ್ಮದ್ ಮುಸ್ತಫಾ, ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಆರ್.ಎಸ್., ಹಮಾಲಿ ಕಾರ್ಮಿಕರ ಸಂಘದ ಅಧ್ಯಕ್ಷ ಅಹ್ಮದ್ ಬಾವ, ಅಟೋರಿಕ್ಷಾ ಚಾಲಕರ ಸಂಘದ ನಗರ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಇರ್ಫಾನ್ ಉಪಸ್ಥಿತರಿದ್ದರು.







