ಮಹಾರಾಣಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಕಿರುಕುಳ ಆರೋಪ: ಅಕೌಂಟೆಂಟ್ ವಿರುದ್ಧ ಕ್ರಮ
ಬೆಂಗಳೂರು, ಜೂ.13: ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಮಹಾರಾಣಿ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಕೌಂಟೆಂಟ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀಬಾಯಿ ತಿಳಿಸಿದ್ದಾರೆ.
ಮಂಗಳವಾರ ನಗರದ ಶೇಷಾದ್ರಿ ರಸ್ತೆಯಲ್ಲಿರುವ ಮಹಾರಾಣಿ ಕಾಲೇಜಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶುಲ್ಕ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಣಿ ಕಾಲೇಜಿನ ಅಕೌಂಟೆಂಟ್ ಶಿವಕಾಳಪ್ಪವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮೊದಲ ವರ್ಷದ ಎಂಬಿಎ ವಿದ್ಯಾರ್ಥಿನಿಯರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಹಾರಾಣಿ ಕಾಲೇಜಿಗೆ ಭೇಟಿ ನೀಡಿ ಶಿವಕಾಳಪ್ಪ ಅವರನ್ನು ವಿಚಾರಣೆ ನಡೆಸಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗುವುದೆಂದು ಹೇಳಿದರು.
ಶಿವಕಾಳಪ್ಪನ ಕಿರುಕುಳದ ಬಗ್ಗೆ ಕಾಲೇಜಿನ ಪ್ರಾಂಶುಪಾಲರಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದಕ್ಕೂ ತಮಗೂ ಸಂಬಂಧವೇ ಇಲ್ಲ ಎಂಬಂತೆ ಅವರು ವರ್ತಿಸುತ್ತಾರೆ. ವಿದ್ಯಾರ್ಥಿನಿಯರನ್ನು ಶಿವಕಾಳಪ್ಪ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ನಡತೆಯ ಬಗ್ಗೆ ಕೆಟ್ಟದಾಗಿ ಅಪಪ್ರಚಾರ ಮಾಡುತ್ತಾರೆ. ಈ ಬಗ್ಗೆ ಯಾರಿಗಾದರೂ ಹೇಳಿದರೆ ಅಂಕಪಟ್ಟಿ ಕೊಡುವುದಿಲ್ಲ ಎಂದು ವಿದ್ಯಾರ್ಥಿನಿಯರು ದೂರಿನಲ್ಲಿ ತಿಳಿಸಿದ್ದಾರೆ ಎಂದು ನಾಗಲಕ್ಷ್ಮೀ ಬಾಯಿ ಮಾಹಿತಿ ನೀಡಿದರು.
ವಿದ್ಯಾರ್ಥಿನಿಯರೊಂದಿಗೆ ಈ ಬಗ್ಗೆ ಚರ್ಚೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿರುವುದಾಗಿ ತಿಳಿಸಿದ ಅವರು, ಈ ಪ್ರಕರಣ ಸಂಬಂಧಪಟ್ಟಂತೆ ಆಯೋಗವು ದಿಟ್ಟ ಕ್ರಮ ತೆಗೆದುಕೊಳ್ಳಲಿದೆ ಎಂದು ನುಡಿದರು.







