ಅಪ್ತಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಗೆ ಶಿಕ್ಷೆ
ಚಾಮರಾಜನಗರ, ಜೂ. 16 : ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಮಾನಸಿಕ ಹಿಂಸೆ ನೀಡಿದ ವ್ಯಕ್ತಿಯೊಬ್ಬರಿಗೆ 2 ವರ್ಷಗಳ ಶಿಕ್ಷೆ ಹಾಗೂ ಒಂದು ಸಾವಿರ ರೂ. ದಂಡ ವಿಧಿಸಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.
ಕೊಳ್ಳೇಗಾಲ ತಾಲೂಕಿನ ಮರಿಯಾಪುರ ಗ್ರಾಮದ ಮಹೇಶ ಅಲಿಯಾಸ್ ಸಾಲ್ಡು ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿ.
ಕಳೆದ 2015ರ ಅಕ್ಟೋಬರ್ 2ರಂದು ಸುಮಾರು ರಾತ್ರಿ 7.15ರ ಸಮಯದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಮಾನಸಿಕ ಹಿಂಸೆ ನೀಡಿದ ಹಿನ್ನೆಲೆಯಲ್ಲಿ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಹೇಶ ಅಲಿಯಾಸ್ ಸಾಲ್ಡುಗೆ ಐಪಿಸಿ ಕಲಂ 354(ಎ) ಮತ್ತು ಪೋಕ್ಸೋ ಕಾಯಿದೆ ಕಲಂ 8ರ ಅಡಿಯಲ್ಲಿ 2 ವರ್ಷಗಳ ಶಿಕ್ಷೆ ಹಾಗೂ ಒಂದು ಸಾವಿರ ರೂ. ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಲಕ್ಷ್ಮಣ್ ಎಫ್ ಮಳವಳ್ಳಿ ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಎಸ್.ನಾಗರಾಜು ಕಾಮಗೆರೆ ವಾದ ಮಂಡಿಸಿದ್ದರು.





