ಕೆಂಪೇಗೌಡ ಬಸ್ ನಿಲ್ದಾಣದ ಸುತ್ತಲಿನ ರಸ್ತೆಗೆ ವೈಟ್ ಟ್ಯಾಪಿಂಗ್ : ಸಿದ್ದರಾಮಯ್ಯ

ಬೆಂಗಳೂರು, ಜೂ.17: ನಗರದ ಬಿಎಂಟಿಸಿ ಹಾಗೂ ಕೆಎಸ್ಸಾರ್ಟಿಸಿ ಕೇಂದ್ರ ಬಸ್ ನಿಲ್ದಾಣದ ಸುತ್ತಮುತ್ತಲಿನ ರಸ್ತೆಗಳನ್ನು ವೈಟ್ ಟ್ಯಾಪಿಂಗ್ ರಸ್ತೆಯನ್ನಾಗಿ ಪರಿವರ್ತಿಸಲಾಗುವುದು ಎಂದು ಮುಖ್ಯಮಂತ್ರಿ ಸದ್ದರಾಮಯ್ಯ ತಿಳಿಸಿದರು.
ಶನಿವಾರ ಬಿಎಂಟಿಸಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಆಯೋಜಿಸಿದ್ದ ಸ್ಮಾರ್ಟ್ ಕಾರ್ಡ್, ನಾಲ್ಕು ಮಾದರಿಯ ಹೊಸ ಬಸ್ ಹಾಗೂ ಪಾದಚಾರಿ ಮೇಲ್ಸೇತುವೆಯನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.
ಶಾಸಕ ದಿನೇಶ್ ಕುಮಾರ್ ಬೇಡಿಕೆಯಂತೆ ಬಿಎಂಟಿಸಿ ಹಾಗೂ ಕೆಂಪೇಗೌಡ ಬಸ್ ನಿಲ್ದಾಣದ ಸುತ್ತಲಿನ ರಸ್ತೆಗಳಿಗೆ ವೈಟ್ ಟ್ಯಾಪಿಂಗ್ ಹಾಕಿಸುವುದು ಸೂಕ್ತ. ಆದರೆ, ಈ ರಸ್ತೆಗಳಿಗೆ ವೈಟ್ ಟ್ಯಾಪಿಂಗ್ ಹಾಕಿಸುವಷ್ಟು ಆರ್ಥಿಕ ಶಕ್ತಿ ಬಿಎಂಟಿಸಿಗೆ ಇಲ್ಲವಾಗಿದೆ. ಹೀಗಾಗಿ ಬೆಂಗಳೂರು ನಗರಾಭಿವೃದ್ಧಿ ಇಲಾಖೆ ವತಿಯಿಂದ ಮಾಡಿಸಲಾಗುವುದು ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಒಂದು ಕೋಟಿ ಹತ್ತು ಲಕ್ಷ ಜನರು ವಾಸಿಸುತ್ತಿದ್ದು, ಸುಮಾರು 67ಲಕ್ಷ ವಾಹನಗಳು ನೋಂದಣಿಯಾಗಿವೆ. ಅದರಲ್ಲಿ 47ಲಕ್ಷ ದ್ವಿಚಕ್ರ ವಾಹನಗಳಾಗಿವೆ. ಹೀಗಾಗಿ ದ್ವಿಚಕ್ರ ಸವಾರರನ್ನು ಬಿಎಂಟಿಸಿ ಬಸ್‌ನತ್ತ ಸೆಳೆಯುವ ನಿಟ್ಟಿನಲ್ಲಿ ರಾಜ್ಯ ಸರಕಾರ ವಿನೂತನವಾದ ಸೇವೆಯನ್ನು ಒದಗಿಸಲಾಗುತ್ತಿದೆ ಎಂದು ಅವರು ಹೇಳಿದರು.
ಬೆಂಗಳೂರು ನಗರದಲ್ಲಿ ಪ್ರತಿದಿನ 52ಲಕ್ಷ ಪ್ರಯಾಣಿಕರು ಸಂಚಾರಿಸುತ್ತಿದ್ದಾರೆ. ಈ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಬೇಕೆಂಬ ಉದ್ದೇಶದಿಂದ ಮೆಟ್ರೋ ರೈಲು ಸಂಚಾರ ಪ್ರಾರಂಭಿಸಲಾಗಿದ್ದು, ಮೊದಲ ಹಂತದ ಮೆಟ್ರೋ ರೈಲು ಸಂಚಾರ ವ್ಯವಸ್ಥೆಯಲ್ಲಿ 5ಲಕ್ಷ ಪ್ರಯಾಣಿಕರು ಸಂಚರಿಸುವ ಅಂದಾಜಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
2020ರ ವೇಳೆಗೆ ಎರಡನೆ ಹಂತದ ಮೆಟ್ರೋ ರೈಲು ಯೋಜನೆ ಪೂರ್ಣಗೊಳ್ಳಲಿದ್ದು, ಒಟ್ಟು 20ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಮೆಟ್ರೋ ರೈಲಿನ ಸದುಪಯೋಗ ಪಡೆಯಲಿದ್ದಾರೆ. ಮೆಟ್ರೋರೈಲು ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮೆಟ್ರೋ ರೈಲು ನಿಲ್ದಾಣಗಳಿಗೆ ಫೀಡರ್ ಬಸ್‌ಗಳ ಮೂಲಕ ಸಂಪರ್ಕ ಕಲ್ಪಿಸಲಾಗುವುದು ಎಂದು ಅವರು ಹೇಳಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಮಾತನಾಡಿ, ಯಾವುದೇ ನಗರದ ಅಭಿವೃದ್ಧಿಯಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಪಾತ್ರ ಪ್ರಧಾನವಾಗಿರುತ್ತದೆ. ಆ ನಿಟ್ಟಿನಲ್ಲಿ ನೋಡುವುದಾದರೆ ರಾಜ್ಯದ ಸಾರಿಗೆ ವ್ಯವಸ್ಥೆ ದೇಶಕ್ಕೆ ಮಾದರಿಯಾಗಿದೆ. ಇದನ್ನು ಮತ್ತಷ್ಟು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಬೇಕಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಏಕ್‌ರೂಪ ಕೌರ್, ಬಿಎಂಟಿಸಿ ಅಧ್ಯಕ್ಷ ನಾಗರಾಜ್ ಯಾದವ್, ಉಪಾಧ್ಯಕ್ಷ ಗೋವಿಂದರಾಜ್ ಮತ್ತಿತರರಿದ್ದರು.







