ಸಚಿವರು-ಶಾಸಕರ ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸಲು ಕೋನರೆಡ್ಡಿ ಆಗ್ರಹ
ಬೆಂಗಳೂರು, ಜೂ.19: ರಾಜ್ಯದಲ್ಲಿ ಮುಚ್ಚುವ ಸ್ಥಿತಿಯಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವ ದೃಷ್ಟಿಯಿಂದ ಮುಖ್ಯಮಂತ್ರಿ, ಸಚಿವರು, ಶಾಸಕರು ಸೇರಿದಂತೆ ಎಲ್ಲರು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಸರಕಾರಿ ಶಾಲೆಗಳಿಗೆ ಸೇರಿಸುವಂತೆ ಸುತ್ತೋಲೆ ಹೊರಡಿಸಬೇಕು ಎಂದು ಜೆಡಿಎಸ್ ಸದಸ್ಯ ಎನ್.ಎಚ್.ಕೋನರೆಡ್ಡಿ ಆಗ್ರಹಿಸಿದ್ದಾರೆ.
ಸೋಮವಾರ ವಿಧಾನಸಭೆಯಲ್ಲಿ ವಿವಿಧ ಇಲಾಖೆ ಬೇಡಿಕೆಗಳ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಖಾಸಗಿ ಶಿಕ್ಷಣ ಸಂಸ್ಥೆಗಳ ಸುಲಿಗೆಗೆ ಕಡಿವಾಣ ಹಾಕಬೇಕು. ಆಂಗ್ಲ ವ್ಯಾಮೋಹಕ್ಕೆ ಸಾರ್ವಜನಿಕರು ಬಲಿಯಾಗುತ್ತಿರುವುದನ್ನು ತಪ್ಪಿಸಬೇಕು ಎಂದು ಒತ್ತಾಯಿಸಿದರು.
ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ರೈತರ ಕೃಷಿ ಸಾಲಮನ್ನಾಕ್ಕೆ ರಾಜ್ಯ ಸರಕಾರ ದಿಟ್ಟ ನಿರ್ಧಾರ ಕೈಗೊಳ್ಳಬೇಕು. ಈ ವಿಚಾರದಲ್ಲಿ ರಾಜ್ಯ ಹಾಗೂ ಕೇಂದ್ರ ಸರಕಾರ ಪರಸ್ಪರ ಆರೋಪ-ಪ್ರತ್ಯಾರೋಪ ಬಿಟ್ಟು ಈ ಬಗ್ಗೆ ಸ್ಪಷ್ಟ ಉತ್ತರ ನೀಡಬೇಕೆಂದು ಮನವಿ ಮಾಡಿದರು.
ಮಹಾದಾಯಿ ಯೋಜನೆ ಜಾರಿಗೆ ಆಗ್ರಹಿಸಿ 680 ದಿನಗಳಿಂದ ಹೋರಾಟ ಮಾಡುತ್ತಿದ್ದು, ಈ ವಿಚಾರದಲ್ಲಿ ಪ್ರಧಾನಿ ಮೋದಿ ಕೂಡಲೇ ಮಧ್ಯಪ್ರವೇಶಿಸಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕು ಎಂದ ಅವರು, ತಾಲೂಕಿಗೊಂದು ಕ್ರೀಡಾಂಗಣ ನಿರ್ಮಾಣಕ್ಕೆ ಭೂಮಿ ಖರೀದಿಗೆ ಅನುದಾನ ನೀಡಿ ಎಂದು ಒತ್ತಾಯಿಸಿದರು.