ಸಾಲಬಾಧೆ:ರೈತ ಆತ್ಮಹತ್ಯೆ

ಮಂಡ್ಯ, ಜೂ.19: ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಮುಂದುವರಿದಿದ್ದು, ಸಾಲಬಾಧೆ ತಾಳಲಾರದೆ ಮತ್ತೊಬ್ಬ ರೈತ ಸೋಮವಾರ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಾಲೂಕಿನ ಚಂದಗಾಲು ಗ್ರಾಮದ ಪಾಪೇಗೌಡ(58) ತನ್ನ ಜಮೀನಿನ ಬಳಿಗೆ ತೆರಳಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ.
ಪಾಪೇಗೌಡ ತನ್ನ 14 ಗುಂಟೆಯಲ್ಲಿ ಬೇಸಾಯ ಮಾಡುತ್ತಿದ್ದು, ಇದಕ್ಕಾಗಿ ಸುಮಾರು 4 ಲಕ್ಷ ರೂ. ಸಾಲ ಮಾಡಿದ್ದರು ಎನ್ನಲಾಗಿದೆ. ನೀರಿಲ್ಲದೆ ಬೆಳೆ ಕೈಕೊಟ್ಟ ಕಾರಣ ಸಾಲ ತೀರಿಸಲು ಸಾಧ್ಯವಾಗಿರಲಿಲ್ಲ.
ಇದರಿಂದ ಬೇಸತ್ತ ಪಾಪೇಗೌಡರು ಜಮೀನಿನ ಬಳಿ ವಿಷ ಸೇವಿಸಿ ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ತಕ್ಷಣ ಜಿಲ್ಲಾಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ಅವರು ಹೇಳಿದ್ದಾರೆ.
ಕಂದಾಯ, ಕೃಷಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಕೆರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.
Next Story





