ಆರನೆ ದಿನಕ್ಕೆ ಕಾಲಿಟ್ಟ ವಸತಿ-ಭೂ ವಂಚಿತರ ಧರಣಿ
_1.jpg)
ಬೆಂಗಳೂರು, ಜೂ.19: ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯ ಬೇಡಿಕೆಗಳ ಈಡೇರಿಕೆ ಸಂಬಂಧ ಜೂ.22ರಂದು ಕ್ಯಾಬಿನೆಟ್ ಸಭೆಯಲ್ಲಿ ಮುಖ್ಯಮಂತ್ರಿಗಳೊಂಡನೆ ಚರ್ಚಿಸಲಾಗುವುದು ಎಂದು ಸಚಿವ ಕಾಗೋಡು ತಿಮ್ಮಪ್ಪ ಭರವಸೆ ನೀಡಿದ್ದಾರೆ.
ಭೂಮಿ ಮತ್ತು ವಸತಿಗಾಗಿ ಆಗ್ರಹಿಸಿ ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿ ಕಳೆದ ಆರು ದಿನಗಳಿಂದ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಸೋಮವಾರ ಭೇಟಿ ನೀಡಿ ಧರಣಿಯನ್ನು ಕೈಬಿಡುವಂತೆ ಮನವಿ ಮಾಡಿದರು. ಆದರೆ ಧರಣಿ ನಿರತರು ನಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ಧರಣಿಯನ್ನು ಕೈಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಕೂಡಲೆ ವಸತಿ ಮತ್ತು ಭೂ ರಹಿತರಿಗೆ ಭೂಮಿ ಹಂಚಬೇಕು. ಈ ಕುರಿತು ಸದನದಲ್ಲಿ ಹೈ ಪವರ್ ಕಮಿಟಿ ರಚನೆಯಾಗುವವರೆಗೂ ಯಾವುದೇ ಕಾರಣಕ್ಕೂ ಧರಣಿಯನ್ನು ನಿಲ್ಲಿಸುವುದಿಲ್ಲ ಎಂದು ಧರಣಿ ನಿರತರು ಒಕ್ಕೋರಲಿನಿಂದ ಎಚ್ಚರಿಸಿದರು.
ರಾಜ್ಯದಲ್ಲಿ ಭೂ ಸುಧಾರಣೆ ಕ್ರಮಗಳು ಜಾರಿಗೆ ಬರಬೇಕು. ಈ ದಿಸೆಯಲ್ಲಿ ರಾಜ್ಯದಲ್ಲಿ ಸರಕಾರಿ ಭೂಮಿ ಎಲ್ಲೆಲ್ಲಿದೆ ಎಂಬುದರ ಬಗ್ಗೆ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ಅರ್ಹ ಫಲಾನುಭವಿಗಳ ಪಟ್ಟಿ ಸಿದ್ಧಪಡಿಸುವ ಹಂತದಲ್ಲಿದೆ. ಈ ಸರ್ವೇ ಸಂಪೂರ್ಣಗೊಂಡ ಬಳಿಕ ಸರಕಾರಕ್ಕೆ ಅರ್ಜಿ ಸಲ್ಲಿಸಿರುವ ವಸತಿ ಮತ್ತು ಭೂ ರಹಿತರಿಗೆ ಹಂಚಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ರಾಜ್ಯದಲ್ಲಿ ಭೂ ಹೋರಾಟಗಾರರ ಮೇಲಿರುವ ಪ್ರಕರಣಗಳನ್ನು ಹಿಂಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ವೇಳೆ ಸಚಿವ ಕಾಗೋಡು ತಿಮ್ಮಪ್ಪ ಭರವಸೆ ನೀಡಿದರು.







