ಕಾಂಗ್ರೆಸ್ ಮುಖಂಡ ಸಿ.ಪಿ. ಜಯರಾಮ ಗೌಡ ನಿಧನ

ಪುತ್ತೂರು, ಜೂ.28: ತಾಲೂರಿನ ಚಾರ್ವಾಕ ಗ್ರಾಮದ ಅರುವ ನಿವಾಸಿ ಹಿರಿಯ ಕಾಂಗ್ರೆಸ್ ಮುಖಂಡ, ಎಪಿಎಂಸಿ ಮಾಜಿ ಅಧ್ಯಕ್ಷ, ಮಂಗಳೂರು ವಿವಿ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾದ ಸಿ.ಪಿ. ಜಯರಾಮ ಗೌಡ(70)ಬುಧವಾರ ಬೆಳಿಗ್ಗೆ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಜೂ.2ರಂದು ಬೆಂಗಳೂರಿನ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾದರು. ಕಾಂಗ್ರೆಸ್‌ನ ಪ್ರಭಾವಿ ನಾಯಕರಾಗಿದ್ದ ಅವರು ಈ ಹಿಂದೆ ಪುತ್ತೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯರಾಗಿ, ಪುತ್ತೂರು ಎಪಿಎಂಸಿ ಸದಸ್ಯರಾಗಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯರಾಗಿ, ಪುತ್ತೂರು ಮಹಾಲಿಂಗೇಶ್ವರ ಐಟಿಐ ಸಂಚಾಲಕರಾಗಿ, ಬೆಳಂದೂರು ಪದವಿ ಕಾಲೇಜಿನ ಕಾರ್ಯಾಧ್ಯಕ್ಷರಾಗಿ, ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಸಲಹಾ ಸಮಿತಿ ಸದಸ್ಯರಾಗಿ, ದೈಪಿಲ ಶಿರಾಡಿ ದೈವಸ್ಥಾನ ಹಾಗೂ ಕುಂಬ್ಲಾಡಿ ಬಾಲಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಸೇವೆ ಸಲ್ಲಿಸಿದ್ದರು.
ಚಾರ್ವಾಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ 35 ವರ್ಷಗಳ ಕಾಲ ಆಡಳಿತ ನಡೆಸಿದ್ದರು. ಗ್ರಾಮೀಣ ಪ್ರದೇಶವಾದ ಬೆಳಂದೂರಿಗೆ ನ್ಯೂ ಮಾಡೆಲ್ ಕಾಲೇಜು ಮಂಜೂರುಗೊಳಿಸುವಲ್ಲಿ ಮುಂಚೂಣಿಯಲ್ಲಿ ಕಾರ್ಯ ನಿರ್ವಹಿಸಿ ಯಶಸ್ವಿಯಾಗಿದ್ದರು





