ರಾಜ್ಯದ ಎಲ್ಲ ಮೀಸಲು ಕ್ಷೇತ್ರ ಗೆಲ್ಲಲು ಶ್ರಮಿಸಿ: ಡಾ.ಜಿ.ಪರಮೇಶ್ವರ್

ಬೆಂಗಳೂರು, ಜು.6: ಕಾಂಗ್ರೆಸ್ ಪಕ್ಷವು ಮೊದಲಿನಿಂದಲೂ ದಲಿತರ ಪರವಾಗಿದೆ. 2018ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಎಲ್ಲರೂ ಸಂಘಟಿತರಾಗಿ ಶ್ರಮಿಸಿದರೆ ಎಲ್ಲ 51 ಮೀಸಲು ಕ್ಷೇತ್ರಗಳಲ್ಲೂ ನಾವು ಗೆಲುವು ಸಾಧಿಸಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಗುರುವಾರ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್‌ರಾಂ ಅವರ 31ನೆ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ದಲಿತರು ತಮಗೆ ಸಿಕ್ಕ ಅವಕಾಶಗಳನ್ನು ಎಲ್ಲ ಹಂತಗಳಲ್ಲೂ ಯಶಸ್ವಿಯಾಗಿ ನಿಭಾಯಿಸುತ್ತಿದ್ದಾರೆ. ಭಾರತ ಹಾಗೂ ಪಾಕಿಸ್ತಾನದ ನಡುವೆ ನಡೆದ ಯುದ್ಧದ ಸಂದರ್ಭದಲ್ಲಿ ಜಗಜೀವನ್‌ರಾಂ ರಕ್ಷಣ ಸಚಿವರಾಗಿದ್ದರು. ಯುದ್ಧದಲ್ಲಿ ಭಾರತವು ಜಯಭೇರಿ ಬಾರಿಸಿತ್ತು. ಆದರೆ, ಅವರ ಬದ್ಧತೆ, ನಾಯಕತ್ವದ ಗುಣಕ್ಕೆ ಪ್ರಚಾರ ಮಾತ್ರ ಸಿಗಲಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಅದೇ ಬೇರೆಯವರು ಆ ಸಂದರ್ಭದಲ್ಲಿ ರಕ್ಷಣಾ ಇಲಾಖೆಯ ಜವಾಬ್ದಾರಿಯನ್ನು ನಿರ್ವಹಿಸಿದ್ದರೆ, ಅದನ್ನು ಬೇರೆ ರೀತಿಯೆ ಪ್ರಚಾರ ಸಿಗುತ್ತಿತ್ತು ಎಂದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದಲ್ಲಿ ಅತ್ಯಂತ ಸಕ್ರಿಯ ಸಚಿವರು ಯಾರಾದರೂ ಇದ್ದರೆ ಅದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ದಲಿತರ ಮನೆಯಲ್ಲಿ ಊಟ ಮಾಡಲು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಹೊಟೇಲ್‌ನಿಂದ ತಿಂಡಿ ತೆಗೆದುಕೊಂಡು ಹೋಗಿದ್ದರು. ಇದೀಗ ದಲಿತರನ್ನ ತಮ್ಮ ಮನೆಗೆ ಊಟಕ್ಕೆ ಕರೆದಿದ್ದಾರಂತೆ. 10-15 ವರ್ಷದ ಹಿಂದೆ ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್ ಮತ್ತು ಬಾಬುಜಗಜೀವನರಾಂ ಅವರ ಭಾವಚಿತ್ರ ಹಾಕಲಾಗಿತ್ತೇ ಎಂದು ಪ್ರಶ್ನಿಸಿದ ಅವರು, ಯಡಿಯೂರಪ್ಪ ಮುಖ್ಯಮಂತ್ರಿ ಆದ ತಕ್ಷಣ ವಿಧಾನಸೌಧದಲ್ಲಿನ ಕಚೇರಿಯಲ್ಲಿದ್ದ ಅಂಬೇಡ್ಕರ್ ಭಾವಚಿತ್ರವನ್ನು ತೆಗೆಸಿದ್ದರು ಎಂದು ವಾಗ್ದಾಳಿ ನಡೆಸಿದರು.
ದಲಿತರ ಕಲ್ಯಾಣಕ್ಕೆ ಕಾಂಗ್ರೆಸ್ ಸರಕಾರದ ಆಡಳಿತಾವಧಿಯಲ್ಲಿ ಏನು ಮಾಡಲಾಗಿದೆ ಎಂಬುದನ್ನು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮಾಹಿತಿ ತರಿಸಿಕೊಂಡು ಮಾತನಾಡಲಿ. ಕಾಂಗ್ರೆಸ್ ಪಕ್ಷದ ವಿರುದ್ಧ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಲಿ ಎಂದು ಅವರು ಎಚ್ಚರಿಕೆ ನೀಡಿದರು.
ರಾಜ್ಯದಲ್ಲಿ ಬಿಜೆಪಿ ಐದು ವರ್ಷಗಳ ಕಾಲ ಆಡಳಿತ ನಡೆಸಿತ್ತು. ಮೂವರು ಮುಖ್ಯಮಂತ್ರಿಗಳು ಅಧಿಕಾರ ನಡೆಸಿದರು. ಈ ಅವಧಿಯಲ್ಲಿ ದಲಿತ ಸಮುದಾಯಕ್ಕೆ ಏನು ಮಾಡಿದ್ದಾರೆ ಎಂಬುದನ್ನು ತಿಳಿದುಕೊಂಡು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಪರಮೇಶ್ವರ್ ತಿರುಗೇಟು ನೀಡಿದರು.
ಸಂಸದ ಕೆ.ಎಚ್.ಮುನಿಯಪ್ಪ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಬಾಬು ಜಗಜೀವನ್‌ರಾಂ ದಲಿತ ಸಮುದಾಯದ ಎರಡು ಕಣ್ಣು ಇದ್ದಂತೆ. ಇವರಿಬ್ಬರು ಒಂದಾಗಿ ಹೋದ ರೀತಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಎಲ್ಲರನ್ನು ಜೊತೆಗೆ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತಿದ್ದಾರೆ ಎಂದರು.
ಬಾಬು ಜಗಜೀವನರಾಮ್ ತತ್ವಗಳನ್ನು ತಮ್ಮ ಕಾರ್ಯವೈಖರಿಯಲ್ಲಿ ಅಳವಡಿಸಿ ಕೊಂಡಿರುವ ಏಕೈಕ ಸಚಿವ ಆಂಜನೇಯ. ಜನಸಂಖ್ಯೆಗೆ ಅನುಗುಣವಾಗಿ ನಮ್ಮ ಸಮುದಾಯಕ್ಕೆ ಬಜೆಟ್‌ನಲ್ಲಿ ಅನುದಾನ ಮೀಸಲಿಡುವಂತೆ ಶ್ರಮಿಸಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರಲು, ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಟ್ಟಿರುವ ಕಾರ್ಯಕ್ರಮಗಳು, ಯೋಜನೆಗಳೆ ಸಾಕು. ಸಂಕಷ್ಟದಲ್ಲಿರುವ ರೈತರ ಸಾಲವನ್ನು ಮನ್ನಾ ಮಾಡುವ ಮೂಲಕ ಕೇಂದ್ರ ಸರಕಾರಕ್ಕೆ ಮಾದರಿಯಾಗಿದ್ದಾರೆ. ಆದರೆ, ಕೇಂದ್ರ ಸಚಿವರು ರೈತರ ಸಾಲ ಮನ್ನಾ ಮಾಡುವುದನ್ನು ‘ಫ್ಯಾಶನ್’(ಶೋಕಿ) ಎನ್ನುತ್ತಾರೆ ಎಂದು ಮುನಿಯಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಸಮುದಾಯದವರು ಅಧಿಕಾರ ಹಿಡಿಯುವ ವಿಚಾರದಲ್ಲಿ ಏರುಪೇರುಗಳಾಗಿರಬಹುದು. ನಮ್ಮಲ್ಲಿ ಸಣ್ಣಪುಟ್ಟ ಸಮಸ್ಯೆಗಳಿರಬಹುದು. ಅವುಗಳನ್ನೆಲ್ಲ ಬದಿಗೊತ್ತಿ ಸಿದ್ದರಾಮಯ್ಯ ಹಾಗೂ ಪರಮೇಶ್ವರ್ ನೇತೃತ್ವದಲ್ಲಿ ಮುಂದಿನ ಚುನಾವಣೆಯನ್ನು ಎದುರಿಸಿ, ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರೋಣ ಎಂದು ಅವರು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಸೇರಿದಂತೆ ಇನ್ನಿತತರು ಉಪಸ್ಥಿತರಿದ್ದರು.







