ಮತಾಂಧ ಶಕ್ತಿಗಳ ವಿರುದ್ಧ ನಿರ್ಣಾಯಕ ಹೋರಾಟ: ಸಂಸದ ನಳಿನ್ ಕುಮಾರ್

ಮಂಗಳೂರು, ಜು. 9: ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಪೊಲೀಸ್ ವ್ಯವಸ್ಥೆಯಲ್ಲಿ ಸಂಪೂರ್ಣ ವಿಶ್ವಾಸ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಅಮಾನುಷ ಕೃತ್ಯ ನಡೆಸುತ್ತಿರುವ ಮತಾಂಧ ಶಕ್ತಿಗಳು ಮತ್ತು ದುಷ್ಕರ್ಮಿಗಳಿಗೆ ಪ್ರಚೋದನೆ ನೀಡುತ್ತಿರುವ ಕಾಂಗ್ರೆಸ್ ಸರಕಾರದ ವಿರುದ್ಧ ನಿರ್ಣಾಯಕ ಹೋರಾಟ ನಡೆಸುವುದು ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳಿಗೆ ಅನಿವಾರ್ಯವಾಗಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಬಿ.ಸಿ.ರೋಡ್‌ನಲ್ಲಿ ಸೆಕ್ಷನ್ ಇದ್ದರೂ ಹಿಂದೂಗಳಿಗೆ ಆದ ಅನ್ಯಾಯದ ವಿರುದ್ಧ ಆಕ್ರೋಶಿತ ಜನರ ಶಕ್ತಿ ಪ್ರದರ್ಶನವಾಗಿದೆ. ಇದರಲ್ಲಿ ಭಾಗವಹಿಸಿದವರ ವಿರುದ್ಧ ಪ್ರಕರಣ ದಾಖಲಿಸುವ ಪೊಲೀಸರಿಗೆ ಆರೆಸೆಸ್ ಕಾರ್ಯಕರ್ತ ಶರತ್ ಹಂತಕರನ್ನು ಪತ್ತೆ ಹಚ್ಚಲು ಇದುವರೆಗೆ ಸಾಧ್ಯವಾಗಿಲ್ಲ. ಶರತ್ ಅಂತಿಮ ಯಾತ್ರೆಗೂ ಕಲ್ಲು ತೂರಾಟ ನಡೆಸುವ ಹೀನ ಕೃತ್ಯ ನಡೆದಿದೆ.
ಶನಿವಾರ ರಾತ್ರಿ ಕುತ್ತಾರಿವಿನಲ್ಲಿ ಚಿರಂಜೀವಿ ಎನ್ನುವ ಯುವಕನ ಮೇಲೆ ತಲವಾರು ಹಲ್ಲೆ ನಡೆದಿದೆ. ತಕ್ಷಣ ಆರೋಪಿಗಳನ್ನು ಬಂಧಿಸಿ ಮತ್ತು ಶರತ್ ಅವರ ಕುಟುಂಬಕ್ಕೆ ಪರಿಹಾರ ನೀಡುವಂತೆ ಸಂಸದರು ಒತ್ತಾಯಿಸಿದ್ದಾರೆ.
ಎನ್‌ಐಎ ತನಿಖೆಗೆ ಕೋರಿಕೆ: ಕರಾವಳಿಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಹತ್ಯೆ ಮಾಡುತ್ತಿರುವ ಬಗ್ಗೆ ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರನ್ನು ವಿನಂತಿಸಲಾಗಿದೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಅಮಾನುಷ ಘಟನೆಗಳಿಗೆ ರಾಜ್ಯ ಸರಕಾರವೇ ನೇರ ಹೊಣೆ .
ಜಿಲ್ಲೆಗೆ ಆಗಮಿಸಿ ಕಾಂಗ್ರೆಸ್ ಸಮಾವೇಶ ನಡೆಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಲ್ಲಿನ ಕಾನೂನು ಸುವ್ಯವಸ್ಥೆ ಬಗ್ಗೆ ಸಭೆ ನಡೆಸುವ ಕನಿಷ್ಠ ಜ್ಞಾನವೂ ಇರಲಿಲ್ಲ. ಕೆಪಿಸಿಸಿ ಅಧ್ಯಕ್ಷರು, ಕಾಂಗ್ರೆಸ್ ಸಚಿವರು ಬಿಜೆಪಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವುದೇ ಅಶಾಂತಿ ಮುಂದುವರಿಯಲು ಕಾರಣವಾಗಿದೆ ಎಂದು ಸಂಸದರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.







