ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತ್ಯು

ಕಲಬುರಗಿ, ಜು.10: ದುಷ್ಕರ್ಮಿಗಳಿಂದ ಅಪಹರಣಕ್ಕೊಳಗಾಗಿ ಸುಟ್ಟ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಮುಹಮ್ಮದ್ ನೂರುದ್ದೀನ್ ಶೇಖ್(22) ಚಿಕಿತ್ಸೆ ಫಲಿಸದೆ ಮೃತಪಟ್ಟ ಯುವಕ. ಜು.5ರಂದು ವಿಳಾಸ ಕೇಳುವ ನೆಪದಲ್ಲಿ ಗುಂಪೊಂದು ಶೇಖ್ ನನ್ನು ಅಪಹರಿಸಿ, ಆತನ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನ ನಡೆಸಿತ್ತು. ತೀವ್ರ ಸುಟ್ಟ ಗಾಯಗಳಾಗಿದ್ದ ಶೇಖ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ.
ಇಲ್ಲಿನ ಗಂಜ್ ಪ್ರದೇಶದಲ್ಲಿನ ಸಾ ಮಿಲ್‌ವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ನೂರುದ್ದೀನ್ ಶೇಖ್ ಎಂದಿನಂತೆ ಕೆಲಸಕ್ಕೆ ತೆರಳುತ್ತಿದ್ದ. ಈ ವೇಳೆ ವಿಳಾಸ ಕೇಳುವ ನೆಪದಲ್ಲಿ ದ್ವಿಚಕ್ರ ವಾಹನದಲ್ಲಿ ಆಗಮಿಸಿದ್ದ ಇಬ್ಬರು ದುಷ್ಕರ್ಮಿಗಳು ಆತನನ್ನು ಅಪಹರಿಸಿದ್ದಾರೆ.
ಬಳಿಕ ವಿಶ್ವವಿದ್ಯಾನಿಲಯ ಪೊಲೀಸ್ ಠಾಣೆ ಸಮೀಪದಲ್ಲಿನ ಹಾಗರಗಾ ಕ್ರಾಸ್ ಬಳಿ ಇರುವ ಇನಾಂದಾರ್ ಕಾಲೇಜ್ ಹಿಂಭಾಗದಲ್ಲಿನ ಯುವಕನ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದರು. ಯಾರು ಈ ಕೃತ್ಯವನ್ನು ನಡೆಸಿದ್ದಾರೆಂಬುದು ಸದ್ಯಕ್ಕೆ ಗೊತ್ತಾಗಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದ ವಾರಸುದಾರರಿಗೆ ಒಪ್ಪಿಸಲಾಗಿದೆ. ಈ ಸಂಬಂಧ ವಿಶ್ವವಿದ್ಯಾನಿಲಯ ಠಾಣಾ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡಿದ್ದು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಕೈಗೊಂಡಿದ್ದಾರೆ.







