ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಆರ್.ಅಶೋಕ್
ಸಂಘ ಪರಿವಾರದ ಮುಖಂಡರ ಕೊಲೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಬೆಂಗಳೂರು, ಜು.12: ದಕ್ಷಿಣ ಕನ್ನಡದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ವಿಫಲವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಒತ್ತಾಯಿಸಿದ್ದಾರೆ.
ಬುಧವಾರ ನಗರದ ಆನಂದ್‌ರಾವ್ ವೃತ್ತದಲ್ಲಿ ಆರೆಸ್ಸೆಸ್ ಮುಖಂಡ ಶರತ್ ಸೇರಿ ಸಂಘ ಪರಿವಾರ ಮುಖಂಡರ ಕೊಲೆ, ಹಲ್ಲೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅವರು, ಶರತ್ ಸೇರಿ ಹತ್ತಕ್ಕೂ ಹೆಚ್ಚು ಕೊಲೆ ನಡೆದಿದೆ. ಇದರ ಹೊಣೆಯನ್ನು ಹೊತ್ತು ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕೆಂದರು.
ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಶರತ್ ಮಡಿವಾಳ ಕೊಲೆಯಾಗಿ ವಾರ ಕಳೆದರೂ ಇನ್ನೂ ಆರೋಪಿಗಳನ್ನು ಬಂಧಿಸಲು ಸಾಧ್ಯವಾಗಿಲ್ಲ. ಪೊಲೀಸರು ಸ್ವತಂತ್ರವಾಗಿ ಕೆಲಸ ಮಾಡಲು ಬಿಡದೆ ಒಂದು ಕೋಮಿನ ಪರವಾಗಿ ಸರಕಾರ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 50 ದಿನಗಳಿಂದ ನಿಷೇಧಾಜ್ಞೆ ಮುಂದುವರೆಯಲು ಸಚಿವರಾದ ರಮಾನಾಥ ರೈ, ಯು.ಟಿ.ಖಾದರ್ ಕಾರಣರಾಗಿದ್ದಾರೆ. ಅವರನ್ನು ಮೊದಲು ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು. ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಮಾತನಾಡಿ, ಕಾಂಗ್ರೆಸ್ ಸರಕಾರ ತೊಲಗುವವರೆಗೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನೆಲೆಸುವುದು ಸಾಧ್ಯವಿಲ್ಲ. ದಕ್ಷಿಣ ಕನ್ನಡದಲ್ಲಿ ನಡೆಯುತ್ತಿರುವ ಕೋಮು ಗಲಭೆ ಕಾಂಗ್ರೆಸ್ ಪ್ರೇರಿತವಾಗಿದೆ ಎಂದು ವಾಗ್ದಾಳಿ ನಡೆಸಿದರು.ಶಾಸಕರಾದ ವಿಜಯಕುಮಾರ್, ಎಸ್.ರಘು ಸೇರಿ ಪ್ರಮುಖರು ಹಾಜರಿದ್ದರು.







