ಈಶ್ವರಪ್ಪ ಆಪ್ತ ಸಹಾಯಕ ವಿನಯ್ ಅಪಹರಣದ ಪತ್ತೆ ಬಗ್ಗೆ ವರದಿ ಸಲ್ಲಿಸಲು ಹೈಕೋರ್ಟ್ ಆದೇಶ

ಬೆಂಗಳೂರು, ಜು.12: ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರ ಆಪ್ತ ಸಹಾಯಕ ವಿನಯ್ ಅಪಹರಣಕ್ಕೆ ಯತ್ನಿಸಿದ ಆರೋಪದಲ್ಲಿ ರೌಡಿಶೀಟರ್ ಪ್ರಶಾಂತ್ ಕುಮಾರ್ ಬಂಧನ ಪ್ರಕರಣ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ.
ವಿನಯ್ ಅಪಹರಣಕ್ಕೆ ಯತ್ನಿಸಿದ ಆರೋಪ ಸಂಬಂಧ ಕೋಲಾರದಲ್ಲಿ ಎಚ್‌ಎಎಲ್ ಪೊಲೀಸರ ಬಂಧನಕ್ಕೊಳಗಾಗಿದ್ದ ಪ್ರಶಾಂತ್ ನಂತರ ತಪ್ಪಿಸಿಕೊಂಡು ಪರಾರಿಯಾಗಿದ್ದ. ಇದೀಗ ಆತನ ಪತ್ನಿ ಅರ್ಚನಾ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದು, ತನ್ನ ಪತಿಯು ಪೊಲೀಸರ ವಶದಿಂದ ತಪ್ಪಿಸಿಕೊಂಡು ಪರಾರಿಯಾಗಿಲ್ಲ. ಬದಲಾಗಿ ಆತನನ್ನು ಪೊಲೀಸರು ಅಕ್ರಮ ಬಂಧನದಲ್ಲಿರಿಸಿದ್ದಾರೆ ಎಂಬ ಬಗ್ಗೆ ಬಲವಾದ ಶಂಕೆಯಿದೆ. ಹೀಗಾಗಿ, ತನ್ನ ಪತಿಯನ್ನು ಕೂಡಲೇ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಪೊಲೀಸರಿಗೆ ಆದೇಶಿಸಬೇಕು ಎಂದು ಕೋರಿದ್ದಾರೆ.
ಬುಧವಾರ ಅರ್ಚನಾ ಅವರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಮಳೀಮಠ ಮತ್ತು ನ್ಯಾಯಮೂರ್ತಿ ಮೈಕಲ್ ಕುನ್ಹ ಅವರಿದ್ದ ವಿಭಾಗೀಯ ಪೀಠ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ನಗರ ಪೊಲೀಸ್ ಆಯುಕ್ತರು, ಗೃಹ ಇಲಾಖೆ ಕಾರ್ಯದರ್ಶಿ, ಎಚ್‌ಎಎಲ್ ಮತ್ತು ಕೆ.ಆರ್.ಪುರ ಠಾಣೆಗಳ ಇನ್ಸ್‌ಪೆಕ್ಟರ್‌ಗಳಿಗೆ ನೋಟಿಸ್ ಜಾರಿ ಮಾಡಿತು. ಜತೆಗೆ, ಪ್ರಕರಣದ ಕುರಿತು ಈವರೆಗೆ ನಡೆದಿರುವ ಬೆಳವಣಿಗೆ ಮತ್ತು ಪ್ರಶಾಂತ್ ಪತ್ತೆ ಕೈಗೊಂಡಿರುವ ಕ್ರಮಗಳ ಕುರಿತು ವರದಿ ಸಲ್ಲಿಸುವಂತೆ ಸೂಚಿಸಿತು.







